ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿ, ಚಿನ್ನದ ಸರ ಕಳ್ಳತನ ಮಾಡಿದ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ಇನ್ನಿಬ್ಬರಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ, ಇಲ್ಲಿನ ಜಿಲ್ಲಾ ವಿಶೇಷ ಶೀಘ್ರಗತಿ ಪೋಕ್ಸೋ ನ್ಯಾಯಾಲಯ ಶನಿವಾರ ತೀರ್ಪು ಪ್ರಕಟಿಸಿದೆ.
ಬೆಳಗಾವಿ ಗಾಂಧಿನಗರದ ಸಾಕೀಬ್‌ಬೇಗ ಫಯಾಜ ನಿಜಾಮಿ (22) ಹಾಗೂ ರಾಜಾರಾಮನಗರದ ರವಿ ಸಿದ್ದಪ್ಪ ನಾಯ್ಕೊಡಿ (34) ಅವರಿಗೆ ಜೀವಾವಧಿ ಶಿಕ್ಷೆಯ ಜೊತೆಗೆ ತಲಾ ₹8.76 ಲಕ್ಷ ದಂಡ ವಿಧಿಸಲಾಗಿದೆ. ಅಪರಾಧಕ್ಕೆ ಸಹಕರಿಸಿದ್ದ ಸಾವಗಾಂವ್ ನಿವಾಸಿಗಳಾದ ರೋಹನ್ ರಾಜೇಶಕುಮಾರ ಪಾಟೀಲ (23) ಮತ್ತು ಅಶುತೋಷ್ ಮಾರುತಿ ಪಾಟೀಲ (23) ಅವರಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹6 ಲಕ್ಷ ದಂಡ ವಿಧಿಸಲಾಗಿದೆ.
2025ರ ಮೇ 10ರಂದು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಫಾರ್ಮ್‌ಹೌಸ್‌ಗೆ ಕರೆದೊಯ್ದು, ಬಲವಂತವಾಗಿ ಮದ್ಯಪಾನ ಮಾಡಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಫಾರ್ಮ್‌ಹೌಸ್ ಬಾಡಿಗೆ ನೀಡಿದ ಕೃತ್ಯ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಂತರ ಪ್ರಕರಣವನ್ನು ಮಾರ್ಕೆಟ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ತನಿಖಾಧಿಕಾರಿಗಳಾದ ಪರಶುರಾಮ ಪೂಜೇರಿ ಹಾಗೂ ಮಹಾಂತೇಶ ಧಾಮಣ್ಣವರು ತನಿಖೆ ನಡೆಸಿ, ವಿಚಾರಣಾಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ 17 ಸಾಕ್ಷಿಗಳು, 124 ದಾಖಲೆಗಳು ಹಾಗೂ 5 ಮುದ್ದೆಮಾಲುಗಳನ್ನು ಪರಿಶೀಲಿಸಿದ ಬಳಿಕ, ನ್ಯಾಯಾಧೀಶರಾದ ಎಂ. ಪುಷ್ಪಲತಾ ಅವರು ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿ ನಾಲ್ವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದಾರೆ.
ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ₹10 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ ಎಂದು ಸರ್ಕಾರದ ಪರ ವಕಾಲತ್ತು ವಹಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ. ಪಾಟೀಲ ಮಾಹಿತಿ ನೀಡಿದ್ದಾರೆ. ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಯ ಪುತ್ರ ಸೇರಿದಂತೆ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಅಪ್ರಾಪ್ತರ ಪಾತ್ರದ ಕುರಿತು ನ್ಯಾಯಾಲಯದಲ್ಲಿ ಇನ್ನೂ ವಿಚಾರಣೆ ನಡೆಯಬೇಕಿದೆ.






