ಇಂದಿನಿಂದಲೇ ರೈತರ ಪಂಪ್ ಸೆಟ್ ಗಳಿಗೆ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲು ಸಿಎಂ ಆದೇಶ

0
572

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕೃಷಿ ಪಂಪ್ ಸೆಟ್ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ನೀಡಲು ನಿರ್ಧರಿಸಲಾಗಿತು.
ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಮಳೆ ಅಭಾವದಿಂದ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.
2022ಕ್ಕೆ ಹೋಲಿಸಿದ್ರೆ 2023 ರಲ್ಲಿ ವಿದ್ಯುತ್ ಬೇಡಿಕೆ ಸರಾಸರಿ ಶೇ.43 ರಷ್ಟು ಹೆಚ್ಚಿದೆ. ಅಕ್ಟೋಬರ್ ತಿಂಗಳಲ್ಲಿ 15,978 ಮೆಗಾವ್ಯಾಟ್ ಬೇಡಿಕೆ ದಾಖಲಾಗಿದೆ. ವಿದ್ಯುತ್ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ. ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ.9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್ 19ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ.