ಇಂದು ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ
ಮೈಸೂರು: ನವರಾತ್ರಿಯ 9ನೇ ದಿನ ಇಂದು ಆಯುಧ ಪೂಜೆ. ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲಿ ನಸುಕಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಆಯುಧ ಪೂಜಾ ನೆರವೇರಿಸಲಿದ್ದಾರೆ. ಈ ಹಿನ್ನೆಲೆ ಅರಮನೆಯಲ್ಲಿ ಬೆಳಗ್ಗಿನಿಂದಲೇ ಆಯುಧ ಪೂಜೆಯ ಧಾರ್ಮಿಕ ಕೈಂಕರ್ಯಗಳು ಆರಂಭವಾಗಿವೆ.
ಬೆಳಿಗ್ಗೆ 6ಗಂಟೆಗೆ ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ಚಂಡಿಕಾಹೋಮ ನೆರವೇರಲಿದ್ದು, ಪಟ್ಟದ ಆನೆ, ಕುದುರೆ, ಹಸು ಆನೆ ಬಾಗಿಲಿಗೆ ಆಗಮನವಾಗಲಿವೆ. ಖಾಸಗಿ ಆಯುಧಗಳನ್ನ ಆನೆ ಬಾಗಿಲು ಮೂಲಕ ಶ್ರೀ ಕೋಡಿ ಸೋಮೇಶ್ವರ ದೇವಾಲಯಕ್ಕೆ ರವಾನೆ ಮಾಡಲಾಗುತ್ತದೆ.
ಬಳಿಕ ಕೋಡಿ ಸೋಮೇಶ್ವರ ದೇವಾಲಯದಿಂದ ಖಾಸಾ ಆಯುಧಗಳನ್ನ ಆನೆ ಬಾಗಿಲ ಮುಖಾಂತರ ಅರಮನೆಯ ಕಲ್ಯಾಣ ಮಂಟಪಕ್ಕೆ ರವಾನೆ ಮಾಡಲಾಗುತ್ತದೆ. ನಂತರ ಚಂಡಿ ಹೋಮ ಪೂರ್ಣಾಹುತಿ ನೆರವೇರಲಿದೆ. ಆ ನಂತರ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಆನೆ ಬಾಗಿಲಿಗೆ ಬಂದು, ಅರಮನೆಯ ಕಲ್ಯಾಣ ಮಂಟಪದಲ್ಲಿ ಆಯುಧ ಪೂಜೆ ನೆರವೇರಲಿದೆ.