ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ
ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (95) ನಿಧನರಾಗಿದ್ದಾರೆ. ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ದಾವಣಗೆರೆಗೆ ತರಲಾಗಿದ್ದು, ಅಂತಿಮ ವಿಧಿವಿಧಾನಗಳು ಹಾಗೂ ಸಾರ್ವಜನಿಕ ದರ್ಶನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕುಟುಂಬದ ವಿಧಿವಿಧಾನಗಳು ಮುಗಿದ ನಂತರ ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರವನ್ನು ನಗರದ ಪಿ.ಜೆ. ಬಡಾವಣೆಯಲ್ಲಿರುವ ಹೈಸ್ಕೂಲ್ ಮೈದಾನಕ್ಕೆ ಸ್ಥಳಾಂತರಿಸಲಾಗುತ್ತದೆ.
ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಸಾರ್ವಜನಿಕರು ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಾರ್ವಜನಿಕ ದರ್ಶನದ ಬಳಿಕ ದಾವಣಗೆರೆಯ ಪ್ರಮುಖ ರಸ್ತೆಗಳಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ.
ಸಂಜೆ 5 ಗಂಟೆಯ ಸುಮಾರಿಗೆ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಶಾಮನೂರು ಶಿವಶಂಕರಪ್ಪ ಅವರ ಧರ್ಮಪತ್ನಿ ಪಾರ್ವತಮ್ಮ ಅವರ ಸಮಾಧಿ ಕಲ್ಲೇಶ್ವರ ಮಿಲ್‌ನಲ್ಲಿರುವುದರಿಂದ, ಅದೇ ಸ್ಥಳದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ.






