ಈ ಜನರಿಂದ ನಮಗೆ ಸೋಲಾಗಿದೆ: ಡಿಕೆಶಿ

0
22

ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಈ ಮೂರು ಮಹಾನಗರ ಪಾಲಿಕೆಗಳ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“ರಾಜ್ಯದ ಮೂರು ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಗಾಬರಿಯಾಗುವಂತದ್ದಲ್ಲ, ಬದಲಾಗಿ ಸಮಾಧಾನ ತಂದಿದೆ,” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಅನೇಕ ಕಡೆ ನಮ್ಮ ಬಂಡಾಯ ಅಭ್ಯರ್ಥಿಗಳು ಗೆದ್ದಿದ್ದಾರೆ. ಜನರು ನೀಡಿರುವ ಫಲಿತಾಂಶ ಸ್ವೀಕಾರ ಮಾಡುತ್ತೇವೆ ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಥಳೀಯ ವಿಚಾರಕ್ಕೆ ಮಹತ್ವ ಇರುತ್ತದೆ. ಹುಬ್ಬಳ್ಳಿಯಲ್ಲಿ ಕಳೆದ 15 ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಸಿಕ್ಕಿಲ್ಲ.

ಆದರೆ ಈ ಬಾರಿಯ ಮಹಾನಗರ ಪಾಲಿಕೆಯ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್‌ ಪರವಾಗಿ ಒಳ್ಳೆಯ ಫಲಿತಾಂಶ ಬಂದಿದೆ. ಅಲ್ಲದೆ, ಇಂತಹ ಚುನಾವಣೆಯಲ್ಲಿ ಅಧಿಕಾರದಲ್ಲಿ ಇರುವವರಿಗೆ ಲಾಭ ಆಗುತ್ತದೆ ಎಂದು ಇದೇ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬಂಡಾಯ ಅಭ್ಯರ್ಥಿಗಳಿಂದ ನಮಗೆ ಸೋಲಾಗಿದೆ, ಜೊತೆಗೆ ತಮಗೆ ಬೇಕಾದಂತೆ ಬಿಜೆಪಿಯವರು ಮೀಸಲಾತಿ ಮಾಡಿಕೊಂಡಿದ್ದರು. ಹೀಗಾಗಿ ಬಿಜೆಪಿಯವರು ಅಲ್ಲಿ ಗೆದ್ದಿದ್ದಾರೆ. ಅಭ್ಯರ್ಥಿಯನ್ನು ಹಾಕುವುದಕ್ಕೆ ನಮಗೆ ಅವಕಾಶ ಕೊಡಲಿಲ್ಲ ಎಂದು ಆರೋಪಿಸಿದರು.

ಚುನಾವಣೆಗೆ ಪ್ರಚಾರ ಮಾಡಲೂ ನಮಗೆ ಅವಕಾಶವೇ ಕೊಡಲಿಲ್ಲ, ಸ್ಥಳೀಯ ಮಟ್ಟದ ಅಭ್ಯರ್ಥಿ ಮೇಲೆ ಚುನಾವಣೆ ನಡೆಯುತ್ತಿರುವುದರಿಂದ, ಈ ಫಲಿತಾಂಶ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿ ಅಲ್ಲ ಎಂದು ಸ್ಪಷ್ಟಪಡಿಸಿದರು. ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಬಹುತೇಕ ಜಯಭೇರಿ ಭಾರಿಸಿದೆ. ಕಲಬುರಗಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಪೈಪೋಟಿ ನಡೆಯುತ್ತಿದೆ. 24 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ 20 ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 7 ವಾರ್ಡ್‌ಗಳ ಫಲಿತಾಂಶ ಬಾಕಿ ಇದೆ.

 

 

 

LEAVE A REPLY

Please enter your comment!
Please enter your name here