ಉದ್ಯಮಿ ರತನ್ ಟಾಟಾ ನಿಧನಕ್ಕೆ ರಾಜಕೀಯ ಗಣ್ಯರಿಂದ ಸಂತಾಪ!
ಮುಂಬೈ: ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ (86) ನಿಧನರಾಗಿದ್ದಾರೆ. ಅವರ ನಿಧನಕ್ಕೆ ಪ್ರಮುಖ ನಾಯಕರೂ ಕಂಬನಿ ಮಿಡಿದಿದ್ದಾರೆ. ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರ್‌ಪಿಜಿ ಎಂಟರ್‌ಪ್ರೈಸಸ್‌ನ ಅಧ್ಯಕ್ಷ ಹರ್ಷ್ ಗೋಯೆಂಕಾ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, ರತನ್ ಟಾಟಾ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗಣ್ಯರು ತಮ್ಮ ಎಕ್ಸ್ ಖಾತೆಗಳಲ್ಲಿ ಸಂತಾಪ ನುಡಿಗಳನ್ನು ಹಂಚಿಕೊಂಡಿದ್ದಾರೆ.
ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಸಂತಾಪ ನುಡಿಗಳನ್ನು ಹಂಚಿಕೊಂಡಿದ್ದಾರೆ.
ರತನ್ ಟಾಟಾ ಅವರ ನಿಧನದ ಸುದ್ದಿ ಕೇಳಿ ನನಗೆ ಅತೀವ ದುಃಖವಾಗಿದೆ. ಲೋಕೋಪಕಾರಿ ಮತ್ತು ಕೈಗಾರಿಕೋದ್ಯಮಿಯಾಗಿ ಅವರ ಪರಂಪರೆಯು ಅಸಂಖ್ಯಾತ ಜೀವನ ಮತ್ತು ಸಮುದಾಯಗಳನ್ನು ಆಳವಾಗಿ ಪ್ರಭಾವಿಸಿದೆ. ಅವರ ದೂರದೃಷ್ಟಿ, ಸಹಾನುಭೂತಿ ಮತ್ತು ಸಾಮಾಜಿಕ ಕಾರಣಗಳಿಗಾಗಿ ಅಚಲವಾದ ಸಮರ್ಪಣೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ. ಈ ಸವಾಲಿನ ಸಮಯದಲ್ಲಿ ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರ ಕುಟುಂಬದೊಂದಿಗೆ ಇವೆ ಎಂದು ಹೆಚ್.ಡಿ ಕುಮಾರಸ್ವಾಮಿ ಸಂತಾಪ ನುಡಿಗಳನ್ನು ಹಂಚಿಕೊಂಡಿದ್ದಾರೆ.