ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಸೂಚನೆ ನೀಡಿದೆ. ಇಂದು (ಅಕ್ಟೋಬರ್ 22) ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ.
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ಕೆಲವೆಡೆ ಭಾರಿ ಮಳೆಯ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಜಾರಿಯಲ್ಲಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವರುಣನ ಅಬ್ಬರ ಹೆಚ್ಚಾಗಿದ್ದು, ಇವೆರಡೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ. ಮಳೆ ಜತೆಗೆ ಬಿರುಗಾಳಿ ವಾಯು ವೇಗವು ಗಂಟೆಗೆ 35-45 ಕಿಲೋಮೀಟರ್ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ, ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಸಣ್ಣ ಪ್ರಮಾಣದ ಮಳೆನಿರೀಕ್ಷೆ ಇದೆ.
ರಾಜಧಾನಿ ಬೆಂಗಳೂರು ನಗರದಲ್ಲಿ, ನಾಳೆ ಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಶೇಕಡಾ 86ರಷ್ಟು ಮಳೆಯ ಸಾಧ್ಯತೆ ಇದೆ. ಗಾಳಿಯ ವೇಗ 11ರಿಂದ 20 ಕಿಲೋಮೀಟರ್‌ಗಳ ನಡುವಿರಬಹುದೆಂದು ಹವಾಮಾನ ಇಲಾಖೆ ಹೇಳಿದೆ. ನಗರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.