ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿಯುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ 30-40 ಕಿಲೋ ಮೀಟರ್ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದ್ದು, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಗಳಲ್ಲಿ 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಅದೇ ವೇಳೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಬಳ್ಳಾರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಬೆಂಗಳೂರು ನಗರದಲ್ಲಿ ಇಂದು ಶೇಕಡಾ 55 ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣ ಇರುವುದು. ನಗರದ ಗರಿಷ್ಠ ಉಷ್ಣಾಂಶ 28°C ಮತ್ತು ಕನಿಷ್ಠ ಉಷ್ಣಾಂಶ 21°C ತಲುಪಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದೇ ವೇಳೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ದಾಖಲಾಗಿದ್ದು, ಅದು ಮುಂದಿನ ದಿನಗಳಲ್ಲಿ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ. ಈ ಚಂಡಮಾರುತಕ್ಕೆ ‘ಮೊಂಟಾ’ (Monta Cyclone) ಎಂದು ನಾಮಕರಣ ಮಾಡಲಾಗಿದೆ. ಅದು ಆಂಧ್ರಪ್ರದೇಶದ ಮಚಿಲಿಪಟ್ಟಣಂ ಮತ್ತು ಕಾಳಿಂಗಪಟ್ಟಣಂ ನಡುವಿನ ಕಾಕಿನಾಡ ಸಮುದ್ರ ತೀರವನ್ನು 90–110 ಕಿ.ಮೀ. ವೇಗದಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.






