ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ
ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಇಂದು (ಡಿಸೆಂಬರ್ 14) ಸಂಜೆ ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
94 ವರ್ಷದ ಶಾಮನೂರು ಶಿವಶಂಕರಪ್ಪ ಅವರು ಭಾರತದಲ್ಲೇ ಹಿರಿಯ ಶಾಸಕರಾಗಿರುವ ಗೌರವಕ್ಕೆ ಪಾತ್ರರಾಗಿದ್ದರು. ಕೆಲ ದಿನಗಳ ಹಿಂದೆ ಅವರನ್ನು ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ವಿವಿಧ ಸುದ್ದಿಗಳು ಹರಡಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ್ದ ಪುತ್ರ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು, ತಮ್ಮ ತಂದೆಯ ಆರೋಗ್ಯ ಸ್ಥಿರವಾಗಿದ್ದು ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದ್ದರು.
ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ತೀವ್ರ ಸಂತಾಪ ವ್ಯಕ್ತವಾಗಿದೆ.






