ಕಾಲ್ತುಳಿತ ಕೇಸ್: ಇಂತಹ ಘಟನೆ ಕ್ರಿಕೆಟ್ ಇತಿಹಾಸದಲ್ಲೇ ನಡೆದಿರಲಿಲ್ಲ – ಜಿ. ಪರಮೇಶ್ವರ್!
ಬೆಂಗಳೂರು:- ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಘಟನೆ ಕ್ರಿಕೆಟ್ ಇತಿಹಾಸದಲ್ಲೇ ಆಗಿರಲಿಲ್ಲ. ಮೊದಲು ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರಿಗೆ ದು:ಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಬುಧವಾರ ಸಿಎಂ ಎಲ್ಲಾ ಮಾಹಿತಿ ಪಡೆದು ಮಾತನಾಡಿದ್ದಾರೆ. ಯಾರೇ ತಪ್ಪು ಮಾಡಿದ್ದರೂ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಯಾವುದೇ ವಿವರಣೆ ಕೊಡಲ್ಲ. ಮ್ಯಾಜಿಸ್ಟ್ರೇಟ್ ತನಿಖೆ ಆದ ನಂತರ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.
ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಮಂದಿ ಗಾಯಗೊಂಡಿದ್ದಾರೆ. 46 ಗಾಯಾಳುಗಳು ಮನೆಗೆ ಹೋಗಿದ್ದಾರೆ. 10 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವವರಿಗೆ ಗಂಭೀರ ಗಾಯಗಳೇನೂ ಆಗಿಲ್ಲ, ಆತಂಕ ಇಲ್ಲ. ಮುಂದೆ ಇಂಥ ವಿಜಯೋತ್ಸವಗಳು ನಡೆಸುವ ಸಂದರ್ಭ ಬಂದಾಗ ಪೊಲೀಸ್ ನಿರ್ದೇಶನಗಳ ಚೌಕಟ್ಟಿನೊಳಗೇ ಮಾಡುತ್ತೇವೆ. ಇದಕ್ಕಾಗಿ ಹೊಸ ಎಸ್‌ಒಪಿ ಮಾಡುತ್ತೇವೆ ಎಂದು ತಿಳಿಸಿದರು.