ಕಾಲ್ತುಳಿತ ಪ್ರಕರಣ: ವಿಚಾರಣೆ 12ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಆರ್ಸಿಬಿ ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ನಲ್ಲಿ ವಿಚಾರಣೆ ಮಾಡಲಾಗಿದೆ. ಸರ್ಕಾರದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೈಕೋರ್ಟ್ ತಿಳಿಸಿದ್ದು, ಯಾವುದೇ ನಿರ್ದೇಶನ ನೀಡದೇ ವಿಚಾರಣೆಯನ್ನು ಜೂನ್ 12ಕ್ಕೆ ಮುಂದೂಡಿದೆ.
ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿಯನ್ನು ಪರಿಗಣಿಸಿರುವ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ನ್ಯಾಯಪೀಠ ಮಂಗಳವಾರ ಕಲಾಪ ಪ್ರಾರಂಭಿಸುತ್ತಿದ್ದಂತೆ, ಮೃತರ ಪರವಾಗಿ ಸೇರಿ ಕೆಲವು ವಕೀಲರು ಮಧ್ಯಂತರ ಅರ್ಜಿ ವಿಚಾರಣೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಹಾಜರಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರನ್ನು ಉದ್ದೇಶಿಸಿದ ಪೀಠ, ಈವರೆಗೂ ವಸ್ತುಸ್ಥಿತಿ ವರದಿಯನ್ನು ಏಕೆ ಸಲ್ಲಿಸಿಲ್ಲ ಎಂದು ಪ್ರಶ್ನಿಸಿತು. ಇದಕ್ಕೆ ಶೆಟ್ಟಿ ಅವರು, ಘಟನೆ ಸಂಬಂಧ ನ್ಯಾಯಾಂಗ ತನಿಖೆ, ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಲಾಗಿದೆ. ತನಿಖಾ ವರದಿ ಬರಬೇಕಾಗಿದೆ. ವರದಿ ಬರುವುದಕ್ಕೂ ಮುನ್ನ ನ್ಯಾಯಾಲಯಕ್ಕೆ ಸಲ್ಲಿಸಿದಲ್ಲಿ ತನಿಖೆಗೂ ಮುನ್ನ ಸರ್ಕಾರ ತೀರ್ಮಾನ ಮಾಡಿದೆ ಎಂಬ ಆರೋಪ ಬರಲಿದೆ. ಆದ್ದರಿಂದ ಒಂದು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಇದನ್ನ ಪರಿಗಣಿಸಿದ ಪೀಠ, ನಿಮ್ಮ ವರದಿಯನ್ನು ಮುಚ್ಚಿದ ಲೋಕಟೆಯಲ್ಲಿ ಸಲ್ಲಿಸುವಂತೆ ಸೂಚನೆ ನೀಡಿತು. ಅಲ್ಲದೆ, ಸರ್ಕಾರ ಸಲ್ಲಿಸುವ ವರದಿಯನ್ನು ಪರಿಗಣಿಸಿ ಮಧ್ಯಂತರ ಅರ್ಜಿಗಳ ಕುರಿತಂತೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಜೂನ್ 12ರಂದು ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ತಿಳಿಸಿ ಮುಂದೂಡಿತು.