14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 17ನೇ ಪಂದ್ಯ ಶುಕ್ರವಾರ ( ಏಪ್ರಿಲ್ 23 ) ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಪರ ಆರಂಭಿಕ ಆಟಗಾರನಾಗಿ ಬಂದ ರೋಹಿತ್ ಶರ್ಮಾ ಈ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಅವರ ದಾಖಲೆಯೊಂದನ್ನು ಸರಿದೂಗಿಸಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿರುವ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 40 ಅರ್ಧಶತಕಗಳನ್ನು ಬಾರಿಸುವುದರ ಮೂಲಕ ಮೂರನೇ ಸ್ಥಾನ ಪಡೆದುಕೊಂಡಿದ್ದರು. ಇದೀಗ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 52 ಎಸೆತಗಳಿಗೆ 63 ರನ್ ಬಾರಿಸಿದ ರೋಹಿತ್ ಶರ್ಮಾ ಕೂಡ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 40 ಅರ್ಧಶತಕಗಳನ್ನು ಪೂರೈಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಅವರ ಜೊತೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಡೇವಿಡ್ ವಾರ್ನರ್ 49 ಅರ್ಧಶತಕಗಳನ್ನು ಸಿಡಿಸುವುದರ ಮೂಲಕ ಅತಿ ಹೆಚ್ಚು ಅರ್ಧಶತಕ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಿಖರ್ ಧವನ್ 43 ಐಪಿಎಲ್ ಅರ್ಧಶತಕಗಳನ್ನು ಸಿಡಿಸಿದ್ದು ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಲಾ 40 ಅರ್ಧಶತಕಗಳನ್ನು ಸಿಡಿಸಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಅರ್ಧಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ.