ಎಲ್ಲೆಡೆ ಚರ್ಚೆಗೆ ಕಾರಣವಾಗಿರುವ ಹಾಗೂ ವಿರೋಧ ಪಕ್ಷದವರ ತೀವ್ರ ಆಕ್ರೋಶಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಪುನಃ ಆರಂಭವಾಗಲಿದೆ.
ಗ್ರಾಮ ವಾಸ್ತವ್ಯ ಕಾರ್ಯಕ್ರಮ ಯಾದಗಿರಿ ಜಿಲ್ಲೆಯಿಂದ ಆರಂಭವಾಗಲಿದ್ದು ಜೂನ್ 21ರಂದು ಅವರು ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಚಂಡರಕಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂತಿಮ ಪಟ್ಟಿಯನ್ನು ಯಾದಗಿರಿ ಜಿಲ್ಲಾಡಳಿತ ಬಿಡುಗಡೆಗೊಳಿಸಿದೆ.
ಜೂ.21ರಂದು ಬೆಳಗ್ಗೆ 3.48ಕ್ಕೆ ಬೆಂಗಳೂರಿನಿಂದ ಹೊರಡುವ ಕರ್ನಾಟಕ ಎಕ್ಸ್‍ಪ್ರೆಸ್ ರೈಲಿನ ಮೂಲಕ ಯಾದಗಿರಿಗೆ ಕುಮಾರಸ್ವಾಮಿ ಆಗಮಿಸಲಿದ್ದು ಸಂಜೆ 6.30ರಿಂದ ರಾತ್ರಿ 8.30ರ ತನಕ ರೈತರೊಂದಿಗೆ ಸಂವಾದ ನಡೆಸಿ ಮಕ್ಕಳ ಸಾಂಸ್ಕೃತಿ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡಿ ನಂತರ ಮಕ್ಕಳೊಂದಿಗೆ ಭೋಜನವನ್ನು ಸವಿದು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
ಮರುದಿನ ಅಂದರೆ ಜೂನ್ 22ರಂದು ಬೆಳಗ್ಗೆ 7.30 ಕ್ಕೆ ಚಂಡರಕಿ ಗ್ರಾಮದಿಂದ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹೆರೂರು-ಬಿ ಗ್ರಾಮಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.