ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ
ನವದೆಹಲಿ: ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ₹2 ಲಕ್ಷ ಪರಿಹಾರ ಘೋಷಿಸಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (PMNRF)ಯಿಂದ ನೆರವು ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಕಾರ್ಯಾಲಯವು ಎಕ್ಸ್ (ಹಿಂದಿನ ಟ್ವಿಟರ್) ಮೂಲಕ ಮಾಹಿತಿ ಹಂಚಿಕೊಂಡಿದೆ.
“ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ, ಅಪಘಾತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.






