ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎನ್. ಚಲುವರಾಯಸ್ವಾಮಿ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ.ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಚೆಲುವರಾಯಸ್ವಾಮಿ, ನಾನು ಸುಮಲತಾ ಅವರಿಗೆ ಬೆಂಬಲ ನೀಡುವುದಾಗಿ ಎಲ್ಲಿಯೂ ಹೇಳಿಲ್ಲ. ಯಾರು ಹೇಳಿದ್ದಾರೆಯೋ ಅವರೇ ಅದನ್ನು ಸಾಬೀತು ಮಾಡಲಿ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನಮ್ಮನ್ನು ಯಾವುದೇ ಸಭೆ, ಸಮಾರಂಭಗಳಿಗೆ ಆಹ್ವಾನಿಸಿಲ್ಲ. ಅವರೆಲ್ಲ ದೊಡ್ಡವರು, ಆನೆ ಇದ್ದಂತೆ, ನಾವು ಇಲಿಗಳು. ಅವರ ಪ್ರಶ್ನೆ, ಹೇಳಿಕೆಗಳಿಗೆ ಪ್ರತಿಕ್ರಿಯಿಸುವಷ್ಟು ನಾವು ದೊಡ್ಡವರಲ್ಲ. ಅವರಿಗೂ ನಮಗೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಜೆಡಿಎಸ್ ನಾಯಕರಿಗೆ ಚೆಲುವರಾಯಸ್ವಾಮಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಮಂಡ್ಯ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಗೆಲುವಿಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರು ಒಟ್ಟಾಗಿ ಕೆಲಸ ಮಾಡಬೇಕೆಂದು ಮಾಜಿ ಸಿಎಂ ಸಿದ್ಧರಾಮಯ್ಯ ಸಭೆಯಲ್ಲಿ ತಿಳಿಸಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಜಮೀರ್ ಅಹ್ಮದ್ ಹಾಗೂ ಮಂಡ್ಯ ಜಿಲ್ಲೆ ಕಾಂಗ್ರೆಸ್ ಮುಖಂಡರಾದ ಮಾಜಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದಾರೆ. ಕೆಲವು ಕಾಂಗ್ರೆಸ್ ಮುಖಂಡರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗಿದೆ.