ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜಿನಾಮೆ ನೀಡಿದ ಬಳಿಕ ನಾಪತ್ತೆಯಾಗಿದ್ದಾರೆ ಎಂದು ಹೊಸಪೇಟೆ ನಗರ ಪೊಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಗದ ಆನಂದ್ ಸಿಂಗ್ ಅತೃಪ್ತ ಶಾಸಕರ ತಂಡವನ್ನು ಸೇರಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಹೊಸಪೇಟೆ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಾವು ನಾಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.
ತಮ್ಮ ತಂದೆ ಜಾರಿ ಬಿದ್ದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಳ್ಳಾರಿ ಮತ್ತು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಅವರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಕಾರಣದಿಂದ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದಾಗಿ ಅವರು ಹೇಳಿದ್ದಾರೆ.
ನಾಪತ್ತೆಯಾದ ಬಗ್ಗೆ ದೂರು ನೀಡಿದ ಹಿನ್ನೆಲೆಯಲ್ಲಿ ಠಾಣೆಗೆ ಹಾಜರಾಗಿ ಹೇಳಿಕೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.ಆನಂದ್ ಸಿಂಗ್ ಅವರ ಮನವೊಲಿಸಲು ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.