ದೆಹಲಿ ಗಲಭೆ: ಖಾಲಿದ್–ಇಮಾಮ್ ಜಾಮೀನು ಅರ್ಜಿ ವಜಾ, ಐವರಿಗೆ ಷರತ್ತುಬದ್ಧ ಜಾಮೀನು
ನವದೆಹಲಿ: 2020ರಲ್ಲಿ ನಡೆದ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಡಿಸೆಂಬರ್ 2025ರಲ್ಲಿ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ್ದ ಸೆಪ್ಟೆಂಬರ್ 2ರ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿಗಳ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಪ್ರಕಟಿಸಿದೆ.
ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಮೊಹಮ್ಮದ್ ಸಮೀರ್ ಖಾನ್, ಶಾದಾಬ್ ಅಹ್ಮದ್ ಮತ್ತು ಶಿಫಾ ಉರ್ ರೆಹಮಾನ್ ಅವರಿಗೆ ಸುಪ್ರೀಂ ಕೋರ್ಟ್ 12 ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಜಾಮೀನು ನೀಡಿದೆ.
ನ್ಯಾಯಾಲಯ ತನ್ನ ತೀರ್ಪಿನಲ್ಲಿ, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್‌ರ ಪಾತ್ರಗಳು ಇತರ ಆರೋಪಿಗಳಿಗಿಂತ ಭಿನ್ನವಾಗಿವೆ ಎಂದು ಹೇಳಿದೆ. ಕ್ರಿಮಿನಲ್ ಪಿತೂರಿಯಲ್ಲಿ ಇಬ್ಬರೂ ಸಕ್ರಿಯವಾಗಿ ಭಾಗವಹಿಸಿದ್ದಾರೆಯೆಂಬುದನ್ನು ಸೂಚಿಸುವ ಸಾಕಷ್ಟು ಪ್ರಾಥಮಿಕ ಸಾಕ್ಷ್ಯಗಳನ್ನು ಪ್ರಾಸಿಕ್ಯೂಷನ್ ಸಲ್ಲಿಸಿದೆ, ಅವು ನ್ಯಾಯಾಲಯಕ್ಕೆ ಸಮರ್ಪಕವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.






