ನಟ ದರ್ಶನ್‌ ಶಸ್ತ್ರಾಸ್ತ್ರ ಪರವಾನಗಿ ಅಮಾನತ್ತಿನಲ್ಲಿಟ್ಟ ಪೊಲೀಸರ ಕ್ರಮಕ್ಕೆ ಹೈಕೋರ್ಟ್‌ ತಡೆ

tnit editors
1 Min Read

ನಟ ದರ್ಶನ್‌ ಶಸ್ತ್ರಾಸ್ತ್ರ ಪರವಾನಗಿ ಅಮಾನತ್ತಿನಲ್ಲಿಟ್ಟ ಪೊಲೀಸರ ಕ್ರಮಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಮಂಜೂರಾಗಿದ್ದ ಶಸ್ತ್ರಾಸ್ತ್ರ ಪರವಾನಗಿಯನ್ನು ಅಮಾನತುಗೊಳಿಸಿದ್ದ ಪೊಲೀಸ್ ಇಲಾಖೆಯ ಕ್ರಮಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ತಮಗೆ ನೀಡಿದ್ದ ಶಸ್ತ್ರಾಸ್ತ್ರ ಪರವಾನಗಿಯನ್ನು ಅಮಾನತು ಮಾಡಿರುವುದನ್ನು ಪ್ರಶ್ನಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು. ಈ ಸಂಬಂಧ ರಾಜ್ಯ ಸರ್ಕಾರ ಹಾಗೂ ಆಡಳಿತ ವಿಭಾಗದ ಡಿಸಿಪಿಗೆ ಆಕ್ಷೇಪಣೆ ಸಲ್ಲಿಸುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.

ಅರ್ಜಿದಾರರು 2008ರಲ್ಲಿ ಶಸ್ತ್ರಾಸ್ತ್ರ ಕಾಯಿದೆಯಡಿ ಪಿಸ್ತೂಲ್ ಹೊಂದಲು ಪರವಾನಗಿ ಪಡೆದಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಸಂದರ್ಭದಲ್ಲಿ, ಶಸ್ತ್ರಾಸ್ತ್ರ ದುರುಪಯೋಗದ ಸಾಧ್ಯತೆಯ ನೆಪದಲ್ಲಿ ಆಡಳಿತ ವಿಭಾಗದ ಡಿಸಿಪಿ ಪರವಾನಗಿಯನ್ನು ಅಮಾನತುಗೊಳಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ದರ್ಶನ್ ಯಾರಿಗೂ ಬೆದರಿಕೆ ಹಾಕಿಲ್ಲ. ಈಗಾಗಲೇ ತಮ್ಮ ಬಳಿಯಿದ್ದ ಶಸ್ತ್ರಾಸ್ತ್ರವನ್ನು ಪೊಲೀಸ್ ಇಲಾಖೆಗೆ ಒಪ್ಪಿಸಿದ್ದಾರೆ. ಆದ್ದರಿಂದ ಅಮಾನತು ಆದೇಶವನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದರು.

ವಾದ ಆಲಿಸಿದ ನ್ಯಾಯಪೀಠ, ಪೊಲೀಸ್ ಇಲಾಖೆಯ ಅಮಾನತು ಆದೇಶಕ್ಕೆ ಮಧ್ಯಂತರ ತಡೆ ನೀಡಿ, ಮುಂದಿನ ವಿಚಾರಣೆಯನ್ನು ಮಾರ್ಚ್ 6ಕ್ಕೆ ಮುಂದೂಡಿತು.

Share This Article