ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ. ಆಕೆಯ ಬೆನ್ನುಮೂಳೆ ಹಾಗೂ ಎರಡು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಪ್ರಿಯಾದ ಸ್ಥಿತಿಯನ್ನು ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.
ಪ್ರಿಯಾ ಹಾಗೂ ನಿಕ್ಸನ್ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಮದುವೆಗೆ ಏಳು ವರ್ಷಗಳಾದರೂ ಮಕ್ಕಳಾಗದಿದ್ದ ಕಾರಣ ನಿಕ್ಸನ್ ಪತ್ನಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಇತ್ತೀಚೆಗೆ ದಂಪತಿಗೆ ಚಿಕಿತ್ಸೆ ಬಳಿಕ ಹೆಣ್ಣುಮಗು ಆಗಿದ್ದರೂ, ನಿಕ್ಸನ್‌ನ ನಡವಳಿಕೆಯಲ್ಲಿ ಯಾವುದೇ ಬದಲಾವಣೆ ಕಂಡುಬರಲಿಲ್ಲ.
ಪ್ರತಿ ದಿನ ಕುಡಿದು ಬಂದು ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದ ನಿಕ್ಸನ್‌ನ ವರ್ತನೆಗೆ ಬೇಸತ್ತು, ಪ್ರಿಯಾ ವಾಸಿಸುತ್ತಿದ್ದ ಮನೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.






