ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ: ಮತ್ತೆ ಜೈಲೇ ಗತಿ
ಬೆಂಗಳೂರು: ಹೊಳೆನರಸೀಪುರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ದ್ವಿತೀಯ ಜಾಮೀನು ಅರ್ಜಿಯನ್ನು ಕೂಡ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಈ ಮೂಲಕ, ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಮ್ಮೆ ನಿರಾಸೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ವಾದ–ಪ್ರತಿವಾದ ಆಲಿಸಿ, ನ್ಯಾಯಾಂಗತ್ಮಕ ದೃಷ್ಟಿಕೋನದಿಂದ ಜಾಮೀನಿಗೆ ಯಾವುದೇ ಅವಕಾಶ ನೀಡಬಾರದು ಎಂಬ ತೀರ್ಮಾನಕ್ಕೆ ಬಂದು ಅರ್ಜಿಯನ್ನು ವಜಾ ಮಾಡಿದ್ದಾರೆ. ಇದರೊಂದಿಗೆ ಎರಡನೇ ಬಾರಿಗೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಪ್ರಜ್ವಲ್ ರೇವಣ್ಣಗೆ ನಿರಾಸೆಯಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ, ಮನೆ ಕೆಲಸದಾಕೆಯೊಬ್ಬರು ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಈ ಪ್ರಕರಣವು ವಿಶೇಷ ತಿರುವು ಪಡೆದಿತ್ತು.