ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ದೇಶ ವ್ಯಾಪಿ ಪ್ರತಿಭಟನೆ ನಡೆಯುತ್ತಿದೆ. ಮಂಗಳೂರಲ್ಲಿ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿ ಇಬ್ಬರು ಮೃತಪಟ್ಟಿದ್ದಾರೆ. ಈ ನಡುವೆ ರಾಜಕೀಯ ಪಕ್ಷಗಳ ನಡುವೆ ವಾಗ್ ಯುದ್ಧ ಜೋರಾಗಿ ನಡೆಯುತ್ತಿದೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಪ್ರಹಾರ ನಡೆಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಂಗಳೂರಲ್ಲಿ ಇಬ್ಬರು ಮೃತಪಟ್ಟಿರುವುದಕ್ಕೆ ಸಿದ್ದರಾಮಯ್ಯ ಯಡಿಯೂರಪ್ಪ ಮತ್ತು ಬಿಜೆಪಿ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.
“ಮೊದಲಬಾರಿ ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾದಾಗ ಇಬ್ಬರು ರೈತರು ಗುಂಡಿಗೆ ಆಹುತಿಯಾದರು. ಎರಡನೇ ಬಾರಿ ಮುಖ್ಯಮಂತ್ರಿಯಾದಾಗ ಇಬ್ಬರು ಅಮಾಯಕ ಯುವಕರು ಗುಂಡಿಗೆ ಬಲಿಯಾಗಿದ್ದಾರೆ. ಬಿಜೆಪಿ ಮೂಲತ: ರೈತ ಮತ್ತು ಯುವಜನ ವಿರೋಧಿ ಎನ್ನುವುದು ಸಾಬೀತಾಗಿದೆ’’ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.