ಬೀದಿ ನಾಯಿಗಳ ಹಾವಳಿ: ಇಬ್ಬರು ಮಕ್ಕಳ ಮೇಲೆ ದಾಳಿ, ಸಾರ್ವಜನಿಕರಲ್ಲಿ ಆತಂಕ
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನೇದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇತ್ತೀಚೆಗೆ ಮನೆಯ ಮುಂದೆ ಆಟವಾಡುತ್ತಿದ್ದ ಇಬ್ಬರು ಪುಟ್ಟ ಬಾಲಕರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ನಡೆದಿದೆ.
ಈ ದಾಳಿಯಲ್ಲಿ 5 ವರ್ಷದ ಹಸನ್ ಹಾಗೂ 3 ವರ್ಷದ ಅಕ್ರಮ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಕ್ಕಳ ಕೈ, ಕಾಲು ಮತ್ತು ಎದೆ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ರಕ್ತಸ್ರಾವವಾಗಿದೆ. ಗಾಯಗೊಂಡ ಮಕ್ಕಳನ್ನು ತಕ್ಷಣ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಾಯದ ತೀವ್ರತೆಯನ್ನು ಗಮನಿಸಿ ಒಬ್ಬ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆಗೆ ಪುರಸಭೆಯ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿರುವ ಪೋಷಕರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಂಕಾಪುರ ಪುರಸಭೆ ಅಧಿಕಾರಿಗಳನ್ನು ಸಾರ್ವಜನಿಕರು ಆಗ್ರಹಿಸಿದ್ದಾರೆ.






