ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ವ್ಯಕ್ತಿ ನೇಣಿಗೆ ಶರಣು!
ಬೆಂಗಳೂರು ನಗರದ ಕಬ್ಬನ್ ಪಾರ್ಕ್ ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ.
ಗುರುವಾರದಿಂದಲೇ ಕಾಣೆಯಾಗಿದ್ದ ಸುರೇಶ್ ಮನೆಗೆ ಮರಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹೆಚ್ಎಸ್ಆರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇಂದು ಬೆಳಗ್ಗೆ ಕಬ್ಬನ್ ಪಾರ್ಕ್ನಲ್ಲಿರುವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಬಂದ ಕಬ್ಬನ್ ಪಾರ್ಕ್ ಪೊಲೀಸರು ಪರಿಶೀಲನೆ ನಡೆಸಿದ ವೇಳೆ ಮೃತನ ಜೇಬಿನಲ್ಲಿ ಐಡಿ ಕಾರ್ಡ್ ಸಿಕ್ಕಿದೆ. ಅದರ ಆಧಾರದ ಮೇಲೆ ಆತ ಎಸ್ಪಿ ರೋಡ್ನಲ್ಲಿರುವ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಮೃತನ ಬಳಿ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಕುಟುಂಬಸ್ಥರಿಗೆ ಮಾಹಿತಿ ನೀಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರೆಸಿದ್ದಾರೆ.






