ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ
ಬೆಂಗಳೂರು: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದಕ್ಕಾಗಿ ಕರ್ನಾಟಕ ರಾಜ್ಯವು ದೇಶದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ರಾಜ್ಯ ಸರ್ಕಾರವನ್ನು ಅಭಿನಂದಿಸಿದೆ.
2024–25ನೇ ಸಾಲಿನಲ್ಲಿ ಬೆಳೆ ವಿಮೆ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತಂದಿರುವುದಕ್ಕಾಗಿ ಬೆಂಗಳೂರಿನಲ್ಲಿ ನಡೆದ 13ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕೇಂದ್ರ ಸಚಿವಾಲಯದ ವತಿಯಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಜ್ಯದಲ್ಲಿ 27,04,166 ರೈತರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ನೋಂದಾಯಿಸಿಕೊಂಡಿದ್ದು, ಇವರಲ್ಲಿ 11,85,642 ರೈತರು ವಿಮಾ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಒಟ್ಟು 2,094 ಕೋಟಿ ರೂ. ವಿಮಾ ಪರಿಹಾರ ಮೊತ್ತವನ್ನು ಕ್ಲೇಮ್ ಮಾಡಲಾಗಿದೆ. ನೈಸರ್ಗಿಕ ವಿಕೋಪಗಳು ಹಾಗೂ ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಸಮಯಕ್ಕೆ ಸರಿಯಾಗಿ ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಕೇಂದ್ರ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ.
ರೈತರ ಆದಾಯ ರಕ್ಷಣೆ ಹಾಗೂ ಆರ್ಥಿಕ ಭದ್ರತೆಗೆ ಕರ್ನಾಟಕ ಸರ್ಕಾರ ನೀಡುತ್ತಿರುವ ಒತ್ತಾಸೆ ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ಗುರುತಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಕೂಡ ಇದೇ ರೀತಿಯ ಸಾಧನೆ ಮುಂದುವರಿಸುವಂತೆ ಕೇಂದ್ರ ಕೃಷಿ ಇಲಾಖೆ ಶುಭ ಹಾರೈಸಿದೆ. ಈ ಯೋಜನೆಯಡಿ ರೈತರು ಮುಂಗಾರು ಬೆಳೆಗೆ ಶೇ. 2 ಹಾಗೂ ಹಿಂಗಾರು ಬೆಳೆಗೆ ಶೇ. 1.5 ರಷ್ಟು ಮಾತ್ರ ಪ್ರೀಮಿಯಂ ಪಾವತಿಸಬೇಕಾಗಿದ್ದು, ಉಳಿದ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭರಿಸುತ್ತವೆ.






