ಭೂಮಿ ವಿಷಯದಲ್ಲಿ ಕಾನೂನು ಹೋರಾಟ ಮಾಡುತ್ತಿದ್ದೇನೆ: ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಭೂಮಿ ವಿಷಯದಲ್ಲಿ ಕಾನೂನು ಹೋರಾಟ ಮಾಡುತ್ತಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೇತಗಾನಹಳ್ಳಿ ಭೂಮಿ ವಿಷಯಕ್ಕೆ ಸಂಬಂಧಿಸಿ ನಾನು ಕಾನೂನು ಹೋರಾಟ ಮಾಡುತ್ತಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ನಾನು ಮೊದಲೇ ಹೇಳಿದ್ದೇನೆ. ರಾಜ್ಯ ಸರ್ಕಾರ ರಾಜಕೀಯ ದುರುದ್ದೇಶದಿಂದ ಕಿರುಕುಳ ನೀಡುತ್ತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಆರೋಪಿಸಿದರು.
ಭೂಮಿ ತೆರವಿಗೆ ರಚಿಸಿಲಾಗಿರುವ ಎಸ್ಐಟಿಗೆ ಹೈಕೋರ್ಟ್ ತಡೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು; ಅದು 40 ವರ್ಷಗಳ ಹಿಂದೆ ಖರೀದಿ ಮಾಡಿದ ಭೂಮಿ. ಅಲ್ಲಿ ಯಾವುದೇ ರೀತಿಯ ಒತ್ತುವರಿ ಆಗಿಲ್ಲ. ಸರ್ಕಾರ ರಾಜಕೀಯ ದ್ವೇಷ ಮಾಡಿಕೊಂಡು ಹೊರಟಿದೆ. ಅದು ಕಾನೂನು ವ್ಯಾಪ್ತಿಯಲ್ಲಿ ನ್ಯಾಯಾಲಯದಲ್ಲಿ ತೀರ್ಮಾನ ಆಗುತ್ತದೆ ಎಂದರು.
ರಾಜಕೀಯ ದ್ವೇಷ ಮಾಡುತ್ತಿದೆ ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದೆ. ಆದರೆ ಇವರು ಮಾಡುತ್ತಿರುವುದು ಏನು? ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಇಟ್ಟುಕೊಂಡು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆಲ್ಲ ಕಾಲವೇ ಉತ್ತರ ನೀಡುತ್ತದೆ ಎಂದು ಕೇಂದ್ರ ಸಚಿವರು ಹೇಳಿದರು.