ಮಹಿಷ ಮಂಡಲೋತ್ಸವ ಆಚರಣೆ: ಇಂದು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ
ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ತಾಲೀಮು ಚುರುಕುಗೊಳಿಸಲಾಗಿದೆ. ಈ ನಡುವೆ ಇಂದು ಚಾಮುಂಡಿ ಬೆಟ್ಟದಲ್ಲಿ ಮಹಿಷ ಮಂಡಲೋತ್ಸವ ಆಚರಣೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಮಧ್ಯಾಹ್ನದವರೆಗೂ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶವಿರುದಿಲ್ಲ.
ಹೌದು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಚಾಮುಂಡಿ ತಾಯಿ ದರ್ಶನಕ್ಕೆ ಯಾರಿಗೂ ಇವತ್ತು ಅವಕಾಶ ಇಲ್ಲ. ಹೀಗಾಗಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮಹಿಷ ದಸರಾ ಆಚರಣಾ ಸಮಿತಿಯು ಇಂದು ಮಹಿಷ ದಸರಾ ಆಚರಣೆಗೆ ಕರೆ ನೀಡಿತ್ತು. ಚಾಮುಂಡಿಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ ಹಾಗೂ ಪುರಭವನದ ಹೊರಾವರಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿತ್ತು.
ಈ ವೇಳೆ ಯಾವುದೇ ಮೆರವಣಿಗೆ, ಬೈಕ್ ರ್‍ಯಾಲಿ ನಡೆಸುವುದು, ಪರ-ವಿರೋಧ ಘೋಷಣೆ ಕೂಗುವುದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವುದು, 5 ಜನರಿಗಿಂತ ಹೆಚ್ಚಿನ ಜನ ಗುಂಪು ಸೇರುವುದು, ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು ಹಾಗೂ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಚಾರ, ದ್ವನಿವರ್ಧಕ ಬಳಸುವುದು, ಫ್ಲೆಕ್ಸ್, ಬ್ಯಾನರ್ ಅಳವಡಿಸುವುದು, ಕರಪತ್ರಗಳನ್ನು ಹಂಚುವುದು, ಮೂರ್ತಿ ಮೆರವಣಿಗೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.