ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕೊಟ್ಟಿದ್ದಾರೆ. ಜೊತೆಗೆ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವುದರ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಆಗುತ್ತಿದೆ. 10 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ ಎಂದು ವರದಿಯಾಗಿದೆ.
ಮಳೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಸಂಬಂಧಿಸಿದ ಸಚಿವರುಗಳಿಗೆ ದೂವರಾಣಿ ಕರೆ ಮಾಡಿ ಸೂಚನೆ ಕೊಟ್ಟಿದ್ದಾರೆ. ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸುವ ಸಂದರ್ಭದಲ್ಲಿಯೇ ಸಂಬಂಧಿಸಿದ ಸಚಿವರಿಗೆ ಸಿಎಂ ಸೂಚನೆ ಕೊಟ್ಟಿದ್ದರು. ಇದೇ ವೇಳೆಯಲ್ಲಿ ರಾಜ್ಯದಲ್ಲಿ ಜೊತೆಗೆ ಮಳೆಯ ಆರ್ಭಟ ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ.
ರಾಜ್ಯದ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಉಳಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಸಿದ್ದಾರೆ.
ಜುಲೈ 23ರಂದು ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಬಳಗಾವಿ, ಹಾವೇರಿ, ಚಿಕ್ಕಮಗಳೂರು, ಧಾರವಾಡ, ಹಾಸನ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ 300 ಮಿಲಿ ಮಿಟರ್‌ಗಿಂತಲೂ ಹೆಚ್ಚು ಮಳೆಯಾಗಿದೆ.