ರನ್ಯಾ ಸ್ಮಗ್ಲಿಂಗ್ ಕೇಸ್: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ತಂದ ಪ್ರಕರಣಕ್ಕೆ ಸಂಬಂಧಿಸಿ ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಬಂಧನಕ್ಕೆ ಒಳಗಾಗಿದ್ದಾರೆ. ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ತನಿಖೆಯೂ ತೀವ್ರಗೊಂಡಿದೆ. ಇದೀಗ ಡಿಜಿಪಿ ರಾಮಚಂದ್ರ ರಾವ್ ಅವರನ್ನೂ ಸಂಕಷ್ಟಕ್ಕೆ ಸಿಲುಕಿಸಿದೆ. ವಿಮಾನ ನಿಲ್ದಾಣದಲ್ಲಿ ರನ್ಯಾ ಅವರಿಗೆ ನೀಡಲಾದ ಶಿಷ್ಟಾಚಾರದಲ್ಲಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿದೆ. ರನ್ಯಾ ಜತೆ ಸಂಪರ್ಕದಲ್ಲಿ ಇಲ್ಲ, ಪ್ರಕರಣಕ್ಕೂ ತಮಗೂ ಸಂಬಂಧ ಇಲ್ಲ ಎಂದು ರಾಮಚಂದ್ರ ರಾವ್ ಇತ್ತೀಚೆಗೆ ಹೇಳಿದ್ದರು. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ಒಂದು ವಾರದ ಒಳಗೆ ತನಿಖೆ ನಡೆಸಲು ಸೂಚಿಸಲಾಗಿದೆ.