ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣ ಬದಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ನಡುವೆ ಹೊಂದಾಣಿಕೆಯೇ ಆಗುತ್ತಿಲ್ಲ. 23ರ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಸಾಕಷ್ಟು ಬದಲಾವಣೆಯಾಗಲಿದೆ ಕಾದು ನೋಡಿ ಎಂದು ಸೂಚ್ಯವಾಗಿ ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ 104 ಸ್ಥಾನಗಳನ್ನು ಗೆದ್ದಿರುವ ನಾವು ಪ್ರತಿಪಕ್ಷ ಸ್ಥಾನದಲ್ಲಿದ್ದೇವೆ. 37 ಸ್ಥಾನ ಗೆದ್ದವರು ಮುಖ್ಯಮಂತ್ರಿಯಾಗಿದ್ದಾರೆ. 2ನೇ ಸ್ಥಾನದಲ್ಲಿದ್ದವರು ಉಪಮುಖ್ಯಮಂತ್ರಿಯಾಗಿದ್ದಾರೆ.ಇದು ಪ್ರಜಾಪ್ರಭುತ್ವದ ವ್ಯಂಗ್ಯ ಎಂದು ಕುಹುಕವಾಡಿದರು.
ಇಬ್ಬರು ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡಲು ಮುಂದೆ ಬಂದಿದ್ದಾರೆ. ಕುಂದಗೋಳ ಮತ್ತು ಚಿಂಚೋಳಿಯನ್ನು ಗೆದ್ದರೆ ನಮಗೆ 108 ಶಾಸಕರ ಬೆಂಬಲ ಸಿಕ್ಕಂತಾಗುತ್ತದೆ. ಕೆಲವು ಅತೃಪ್ತ ಶಾಸಕರು ಬಿಜೆಪಿಗೆ ಬರಲು ಮುಂದೆ ಬಂದಿದ್ದಾರೆ. ಫಲಿತಾಂಶ ಪ್ರಕಟವಾಗುವವರೆಗೂ ಯಾವುದೇ ರೀತಿಯ ತೀರ್ಮಾನ ಕೈಗೊಳ್ಳದಂತೆ ನಾವೇ ಸೂಚಿಸಿದ್ದೇವೆ ಎಂದು ಹೇಳಿದರು.