ರಾಜ್ಯದಲ್ಲಿ ಮೈಕೊರೆಯುವ ಚಳಿ ಹೆಚ್ಚಳ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮೈಕೊರೆಯುವ ಚಳಿ ಜನಜೀವನವನ್ನು ತತ್ತರಗೊಳಿಸಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14–15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಹೆಚ್‌ಎಎಲ್ ವ್ಯಾಪ್ತಿಯಲ್ಲಿ ಶುಕ್ರವಾರ 13 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆಯಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಶೀತದ ಅಲೆಗಳು ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಡಿಸೆಂಬರ್ 14, 15 ಮತ್ತು 16ರಂದು ಚಳಿ ಹಾಗೂ ಶೀತಗಾಳಿಯ ಪ್ರಭಾವ ಹೆಚ್ಚಾಗುವ ನಿರೀಕ್ಷೆಯಿದೆ.
ಬೀದರ್, ಕಲಬುರಗಿ, ರಾಜಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 9 ರಿಂದ 12 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಹಾಸನ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 12 ರಿಂದ 13 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದ್ದು, ಬೆಂಗಳೂರಿನಲ್ಲಿ 12 ರಿಂದ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.
ಉತ್ತರ ಭಾರತದಿಂದ ಒಣಹವೆ ರಾಜ್ಯಕ್ಕೆ ಪ್ರವೇಶಿಸಿರುವುದೇ ಚಳಿ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.






