ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ! ಗುಡುಗು ಸಹಿತ ಮಳೆ
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದ್ದರೂ, ಕೆಲವೊಂದು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟಿಸಿದೆ.
ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಉತ್ತಮ ಮಳೆಯಾಗಲಿದ್ದು, ಈ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಹೊರತಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯ ಸಂಭವ ಬಹಳ ಕಡಿಮೆ ಎಂದು ಇಲಾಖೆ ವರದಿ ಮಾಡಿದೆ.
ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು ಸ್ವಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಸುಮಾರು 1.8 ಮಿ.ಮೀ.ರಿಂದ 14.7 ಮಿ.ಮೀ. ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಳಿಯ ವೇಗ ಗಂಟೆಗೆ 10 ರಿಂದ 13 ಕಿ.ಮೀ. ಇರುವ ಸಾಧ್ಯತೆ ಇದೆ.