ರಾಜ್ಯದ ಹಿತ ಬಲಿ ಕೊಟ್ಟು ತಮಿಳುನಾಡಿನ ಎರಡನೇ ಬೆಳೆಗೆ ನೀರು ಬಿಟ್ಟಿದೆ !

0
116

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿಸಿ ಕಾವೇರಿ ಜಲಾನಯನ ಪ್ರದೇಶದ ತಾಲೂಕುಗಳಲ್ಲಿ ಕಾವೇರಿ ರಕ್ಷಣಾ ಯಾತ್ರೆ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಕಾವೇರಿ ಕೊಳ್ಳದ ಜಿಲ್ಲೆಗಳ ಪಕ್ಷದ ನಾಯಕರ ಜೊತೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಜೂನ್ ತಿಂಗಳಲ್ಲಿಯೇ ಕಾವೇರಿ ನೀರು ನಿರ್ವಹಣೆ ಆಗಬೇಕಿತ್ತು. ನಾವು 30%ರಷ್ಟು ನೀರನ್ನೂ ನಮ್ಮ ರೈತರಿಗೆ ಮಾಡಿಲ್ಲ. ತಮಿಳುನಾಡು ಎರಡನೇ ಬೆಳೆ ಬೆಳೆಯುತ್ತಿದೆ. ಸರ್ಕಾರ ಸಿಡಬ್ಲ್ಯೂಆರ್ಸಿ, ಸಿಡಬ್ಲ್ಯೂಎಂಎ ಮುಂದೆ ಸರಿಯಾಗಿ ಪ್ರತಿಪಾದಿಸಲಿಲ್ಲ. ಸರ್ಕಾರ ರಾಜ್ಯದ ಹಿತ ಬಲಿ ಕೊಟ್ಟು ತಮಿಳುನಾಡಿನ ಎರಡನೇ ಬೆಳೆಗೆ ನೀರು ಬಿಟ್ಟಿದೆ. ಇದರ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಸರಿಯಾಗಿ ಮನವರಿಕೆ ಮಾಡಿಕೊಡಲಿಲ್ಲ. ನೀರು ಬಿಟ್ಟು ನಮಗೆ ಸಮಸ್ಯೆ ಆಗಿದೆ. ರಾಜ್ಯ ಸರ್ಕಾರ ರಕ್ಷಣಾತ್ಮಕ ಆಗಿ ನಡೆದುಕೊಳ್ಳುತ್ತಿದೆ. ಈ ಸರ್ಕಾರ ರಾಜ್ಯದ ನೀರಿನ ಹಕ್ಕು ರಕ್ಷಣೆ ಮಾಡಿಲ್ಲ. ನೀರಿನ ಹಕ್ಕು ರಕ್ಷಣೆ ಮಾಡುವ ಬದ್ಧತೆ, ಯೋಗ್ಯತೆ ಈ ಸರ್ಕಾರಕ್ಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.