ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ
ದಾವಣಗೆರೆ: ಕೇಂದ್ರ ಸರ್ಕಾರ ರೈಲು ಪ್ರಯಾಣ ದರವನ್ನು ಏರಿಕೆ ಮಾಡಿದ್ದು, ಇದರಿಂದ ಜನಸಾಮಾನ್ಯರ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ. ಆದರೆ ಈ ವಿಚಾರದಲ್ಲಿ ರಾಜ್ಯದ ಬಿಜೆಪಿ ನಾಯಕರು ಯಾವುದೇ ಪ್ರಶ್ನೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇಂದು ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ರೈಲು ದರ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿದರು.
ಇದೇ ವೇಳೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ನಡೆದ ಬಸ್–ಟ್ರಕ್ ಅಪಘಾತದ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಾಥಮಿಕ ಮಾಹಿತಿಯ ಪ್ರಕಾರ ಅಪಘಾತಕ್ಕೆ ಟ್ರಕ್ ಚಾಲಕನ ತಪ್ಪೇ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ ಎಂದರು. ವಿರುದ್ಧ ದಿಕ್ಕಿನಿಂದ ಬಂದ ಟ್ರಕ್, ರಸ್ತೆ ವಿಭಜಕವನ್ನು ದಾಟಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿಸಿದರು.
ಈ ದುರ್ಘಟನೆಯಲ್ಲಿ ನಾಲ್ವರು ಮಹಿಳೆಯರು, ಒಂದು ಮಗು ಹಾಗೂ ಟ್ರಕ್ ಚಾಲಕ ಸೇರಿ ಆರು ಮಂದಿ ಮೃತಪಟ್ಟಿದ್ದಾರೆ. ಸಾರ್ವಜನಿಕ ಸಾರಿಗೆ ವಾಹನಗಳು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು. ಅಪಘಾತದ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಅವರು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ, ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ತಾವು ಇಂದು ನವದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು.






