ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಅಶ್ಲೀಲ ಕಾಮೆಂಟ್: ಮತ್ತಿಬ್ಬರು ಆರೋಪಿಗಳ ಬಂಧನ
ಬೆಂಗಳೂರು: ನಟಿ ವಿಜಯಲಕ್ಷ್ಮಿ ದರ್ಶನ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದ ಮತ್ತಿಬ್ಬರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಹುಬ್ಬಳ್ಳಿಯ ಪೆಟ್ರೋಲ್ ಬಂಕ್ ಮ್ಯಾನೇಜರ್ ನಾಗರಾಜ್ ಗುಳ್ಳಪ್ಪ ತಳವಾರ (23) ಹಾಗೂ ಧಾರವಾಡ ಮೂಲದ ಆಡಿಟರ್ ಪ್ರಶಾಂತ್ ತಳವಾರ (23) ಎಂದು ಗುರುತಿಸಲಾಗಿದೆ. ಇದಕ್ಕೂ ಮುನ್ನ ಚಂದ್ರಶೇಖರ್ ಹಾಗೂ ನಿತಿನ್ (31) ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಮೂಲಕ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ.
ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ‘ಡೆವಿಲ್’ ಸಿನಿಮಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಜಯಲಕ್ಷ್ಮಿ ದರ್ಶನ್, “ದರ್ಶನ್ ಅವರು ಹೇಳಿದಂತೆ, ಯಾರು ಏನೇ ಹೇಳಿದರೂ ಅಭಿಮಾನಿಗಳು ತಲೆ ಕೆಡಿಸಿಕೊಳ್ಳಬಾರದು” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಅಶ್ಲೀಲ ಕಾಮೆಂಟ್ ಹಾಗೂ ಅವಾಚ್ಯ ಪೋಸ್ಟ್‌ಗಳು ಹೆಚ್ಚಾಗಿವೆ ಎಂದು ಆರೋಪಿಸಿ ವಿಜಯಲಕ್ಷ್ಮಿ ಪೊಲೀಸ್‌ರಿಗೆ ದೂರು ನೀಡಿದ್ದರು.
ಅಲ್ಲದೆ, ಸ್ವತಃ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಸುಮಾರು 18 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ ಸಿಸಿಬಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿತ್ತು.
ಆದರೆ ದೂರು ನೀಡಿದರೂ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾಗ್ರಾಂ ಖಾತೆ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು. ಎರಡು ದಿನಗಳ ಹಿಂದೆ ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿದ್ದ ಅವರು, ತನಿಖಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, “ವಿಜಯಲಕ್ಷ್ಮಿ ನೀಡಿದ ದೂರಿನ ಬಳಿಕ ಕಾನೂನು ಪ್ರಕಾರ ತಕ್ಷಣವೇ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಈ ಪ್ರಕರಣವನ್ನು ಡಿಸಿಪಿ ಹಂತದ ಅಧಿಕಾರಿಯಿಂದಲೇ ತನಿಖೆ ನಡೆಸಲಾಗುತ್ತಿದೆ. ತನಿಖೆ ವಿಳಂಬವಾಗುತ್ತಿದೆ ಎಂಬ ಆರೋಪ ಸತ್ಯವಲ್ಲ. ಯಾವುದೇ ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ವಿಜಯಲಕ್ಷ್ಮಿ, “ದರ್ಶನ್ ಅವರು ಇಲ್ಲದ ಸಂದರ್ಭದಲ್ಲಿ ಕೆಲವರು ಅವರ ಹಾಗೂ ಅಭಿಮಾನಿಗಳ ವಿರುದ್ಧ ಮಾತನಾಡುತ್ತಿದ್ದಾರೆ. ಅಭಿಮಾನಿಗಳು ಯಾವುದೇ ಕಾರಣಕ್ಕೂ ಉದ್ವೇಗಕ್ಕೆ ಒಳಗಾಗದೇ ಶಾಂತಿಯುತವಾಗಿರಬೇಕು” ಎಂದು ಮನವಿ ಮಾಡಿದ್ದರು.






