ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ. ಲೋಕಸಭೆ ಚುನಾವಣೆವರೆಗೂ ಮಾತ್ರ ಈ ಸರ್ಕಾರಕ್ಕೆ ಆಯಸ್ಸು ಎಂಬ ಮಾತುಗಳು ಕೇಳಿಬರುತ್ತಿದ್ದವು.
ಪ್ರಸ್ತುತ ಕಾಂಗ್ರೆಸ್ ಪಕ್ಷದ 13 ಶಾಸಕರು ರಾಜೀನಾಮೆ ಸಲ್ಲಿಸಿದ್ದು, ಇವರಲ್ಲಿ ಹೆಚ್ಚಿನವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದಾರೆ. ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ, ಎಂಟಿಬಿ ನಾಗರಾಜ್, ರಮೇಶ್ ಜಾರಕಿಹೊಳಿ ಮೊದಲಾದವರು ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿ ಇದ್ದರು.
ಈ ಶಾಸಕರೇ ಸಿಡಿದೆದ್ದು ರಾಜೀನಾಮೆ ನೀಡಿದ್ದು ಸಿದ್ದರಾಮಯ್ಯ ಕುಮ್ಮಕ್ಕಿನಿಂದ ಶಾಸಕರು ಬಂಡಾಯವೆದ್ದಿದ್ದಾರೆ ಎಂದು ಹೇಳಲಾಗಿದೆ. ಸಿಎಂ ಕುಮಾರಸ್ವಾಮಿ ಮೈತ್ರಿ ಧರ್ಮ ಪಾಲಿಸುತ್ತಿಲ್ಲ, ಅನುದಾನ, ವರ್ಗಾವಣೆ, ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಶಾಸಕರನ್ನು ನಿರ್ಲಕ್ಷಿಸಲಾಗಿದೆ ಎಂಬ ಆರೋಪಗಳಿವೆ.
ಸಿದ್ದರಾಮಯ್ಯ ಬೆಂಬಲಿಗರು ಕೂಡ ಈ ಬಗ್ಗೆ ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದರು. ಆಕ್ರೋಶ ಈಗ ರಾಜೀನಾಮೆ ನೀಡುವ ಹಂತಕ್ಕೆ ತಲುಪಿದೆ. ಸಿದ್ದರಾಮಯ್ಯನವರ ಕುಮ್ಮಕ್ಕಿನಿಂದಾಗಿ ಶಾಸಕರ ಬಂಡಾಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.ಆದರೆ, ಬೆಂಬಲಿಗರ ನಿರೀಕ್ಷೆಗೆ ಸಿದ್ಧರಾಮಯ್ಯ ಸ್ಪಂದಿಸದ ಕಾರಣ ಅವರಿಂದ ದೂರವಾದ ಬೆಂಬಲಿಗರು ರಾಜೀನಾಮೆ ನೀಡಿದ್ದಾರೆ. ಸಿದ್ಧರಾಮಯ್ಯ ವಿರುದ್ಧವೇ ಆಕ್ರೋಶ ಹೊರ ಹಾಕಿದ್ದಾರೆ ಎನ್ನಲಾಗಿದೆ.