ವಿಧಾನಸಭಾಧ್ಯಕ್ಷರು ರಾಜೀನಾಮೆ ನೀಡಿದ್ದ ಶಾಸಕರನ್ನು ಬಹಳ ಅವಸರದಲ್ಲಿ ಅನರ್ಹಗೊಳಿಸಿ ತೀರ್ಪು ನೀಡಿದ್ದಾರೆಂದು ಪ್ರತಿಕ್ರಿಯಿಸಿದ ಮಾಜಿ ಸಚಿವ ಎಚ್.ವಿಶ್ವನಾಥ್ ಅವರು ಈ ತೀರ್ಪಿನ ವಿರುದ್ಧ ರಾಜ್ಯ ಹೈಕೋರ್ಟಿನ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.
ಇಂದು ವಿಧಾನಸಭಾಧ್ಯಕ್ಷರು ಶಾಸಕರನ್ನು ಅನರ್ಹಗೊಳಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅನರ್ಹತೆ ಅರ್ಜಿಯನ್ನು ಆಧರಿಸಿ ಈ ತೀರ್ಪು ನೀಡಲಾಗಿದೆ. ಆದರೆ ನಾವು ಖುದ್ದು ಹಾಜರಾಗಿ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಿಚಾರ ಹೆಚ್ಚು ಪ್ರಸ್ತಾಪವಾಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.