ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?
ಬೆಂಗಳೂರು: ರಾಜ್ಯದ ಪ್ರಮುಖ ಸಮಸ್ಯೆಗಳ ಕುರಿತು ಮುಂದಿನ ಸಂಸತ್ ಅಧಿವೇಶನದಲ್ಲಿ ಚರ್ಚೆ ನಡೆಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಸಚಿವ ಶರಣು ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ರಾಹುಲ್ ಗಾಂಧಿ ಅವರು ಲೋಕಸಭೆ ವಿಪಕ್ಷ ನಾಯಕರು. ಜನವರಿ 28ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಅನೇಕ ಮಹತ್ವದ ವಿಚಾರಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಬೇಕಿದೆ” ಎಂದು ಹೇಳಿದರು.
ಮನರೇಗಾ ಯೋಜನೆ, ತೆರಿಗೆ ಹಂಚಿಕೆ, ಏಮ್ಸ್ ಸ್ಥಾಪನೆ, ಯುಕೆಪಿ (ಉತ್ತರ ಕರ್ನಾಟಕ ಯೋಜನೆ) ಸೇರಿದಂತೆ ಹಲವು ವಿಷಯಗಳು ಸಂಸತ್ತಿನಲ್ಲಿ ಚರ್ಚೆಗೆ ಬರಬೇಕಿದ್ದು, ಈ ಕುರಿತು ರಾಹುಲ್ ಗಾಂಧಿ ಅವರೊಂದಿಗೆ ಮುಖ್ಯಮಂತ್ರಿ ಮಾತನಾಡಿದ್ದಾರೆ ಎಂದು ಶರಣು ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು. “ಆ ಸಭೆಯಲ್ಲಿ ರಾಜಕೀಯ ವಿಷಯಗಳ ಬಗ್ಗೆ ಮಾತನಾಡಲಾಗಿದೆಯೇ ಎಂಬ ಮಾಹಿತಿ ನನಗೆ ಇಲ್ಲ” ಎಂದು ಹೇಳಿದರು.






