ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ
ಬೆಂಗಳೂರು: ತಾವು ಪ್ರಾಮಾಣಿಕ ಮುಖ್ಯಮಂತ್ರಿ ಎಂದು ತೋರಿಸಿಕೊಳ್ಳಲು ಸಿದ್ದರಾಮಯ್ಯನವರು ತಮ್ಮ ಅವಧಿಯಲ್ಲಿ 7 ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದಾರೆ. ಆದರೆ ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ಕೊಡಲು ಮಾತ್ರ ಯಾಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಶಾಸಕ ಜಿ. ಜನಾರ್ಧನ ರೆಡ್ಡಿ ತೀವ್ರ ಪ್ರಶ್ನೆ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಎಷ್ಟು ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗಿದೆ, ಸಿದ್ದರಾಮಯ್ಯರ ಅವಧಿಯಲ್ಲಿ ಎಷ್ಟು ಪ್ರಕರಣಗಳನ್ನು ವಹಿಸಲಾಗಿದೆ ಎಂಬುದು ಮುಖ್ಯ ವಿಚಾರವಲ್ಲ. ಬಳ್ಳಾರಿ ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟು ಸಿಬಿಐ ತನಿಖೆ ನಡೆಸಬೇಕು ಎಂಬುದೇ ನಮ್ಮ ಆಗ್ರಹ ಎಂದು ಹೇಳಿದರು.
ನಿಮ್ಮ ಶಾಸಕರೇ ಕೊಲೆ ಮಾಡಿಸಿದ್ದಾರೆ ಎಂಬುದು ಕಾಂಗ್ರೆಸ್ ನಾಯಕರಿಗೆ ತಿಳಿದಿದ್ದರೂ, ಕೇವಲ ಮೂವರು ಖಾಸಗಿ ಗನ್ಮೆನ್ಗಳನ್ನು ಬಂಧಿಸಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಶಾಸಕರ ಬಂಧನವಾಗಬಾರದು ಎಂಬ ನಿಮ್ಮ ದುರುದ್ದೇಶ ಇದರಿಂದ ಬಹಿರಂಗವಾಗುತ್ತಿದೆ ಎಂದು ಜನಾರ್ಧನ ರೆಡ್ಡಿ ಆರೋಪಿಸಿದರು.
7 ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೇನೆ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯನವರು, ಈ ಪ್ರಕರಣವನ್ನೂ ಸಿಬಿಐಗೆ ಒಪ್ಪಿಸಲು ಹಿಂದೇಟು ಹಾಕುತ್ತಿರುವುದರ ಬಗ್ಗೆ ರಾಜ್ಯದ ಜನರಿಗೆ ಉತ್ತರ ನೀಡಬೇಕು. ವಿಷಯಾಂತರ ಮಾಡುವ ಮೂಲಕ ಸತ್ಯವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಬಳ್ಳಾರಿ ಪ್ರಕರಣದಲ್ಲಿ ಕ್ರಿಮಿನಲ್ ಶಾಸಕ ನಾ.ರಾ. ಭರತ್ ರೆಡ್ಡಿ ಐದು–ಆರು ಸಾವಿರ ಜನರೊಂದಿಗೆ ನಮ್ಮ ಮನೆ ಮೇಲೆ ದಾಳಿ ನಡೆಸಿ ಪೆಟ್ರೋಲ್ ಬಾಂಬ್ ಎಸೆದು, ಗನ್ ಫೈರಿಂಗ್ ಮಾಡಿಸಿದ್ದಾರೆ. ಈ ಘಟನೆಯಲ್ಲಿ ಒಬ್ಬ ಅಮಾಯಕ ವ್ಯಕ್ತಿ ಮೃತಪಟ್ಟಿದ್ದು, ಇದು ನನ್ನ ಮೇಲಿನ ಕೊಲೆ ಯತ್ನವಾಗಿದೆ ಎಂದು ಅವರು ಹೇಳಿದರು.
ಬಳ್ಳಾರಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಬಳ್ಳಾರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿಯೂ ಸಿಬಿಐ ತನಿಖೆಗೆ ಒತ್ತಾಯಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.






