ಹಾನಗಲ್ ಕ್ಷೇತ್ರದ ಶಾಸಕ, ಮಾಜಿ ಸಚಿವ ಸಿ.ಎಂ.ಉದಾಸಿ (85) ಮಂಗಳವಾರ ದೀರ್ಘಕಾಲದ ಅನಾರೋಗ್ಯದಿಂದ ನಿಧನರಾದರು.
ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
1983ರಲ್ಲಿ ಮೊದಲ ಬಾರಿಗೆ ವಿಧಾನಸಭೆಯನ್ನು ಪಕ್ಷೇತರರಾಗಿ ಪ್ರವೇಶಿಸಿದ್ದ ಉದಾಸಿ, 1985 ರಲ್ಲಿ ಜನತಾಪಕ್ಷದಿಂದ ಗೆಲುವು ಸಾಧಿಸಿದ್ದರು. 1994 ರಲ್ಲಿ ಜನತಾದಳದಿಂದ ಆಯ್ಕೆಯಾಗಿದ್ದರು. ದಳ ಇಬ್ಭಾಗ ಆದ ನಂತರ ಅವರು ಬಿಜೆಪಿ ಸೇರಿದ್ದರು. 2004, 2008 ಮತ್ತು 2018 ರಲ್ಲಿ ಬಿಜೆಪಿಯಿಂದ ಗೆದ್ದಿದ್ದರು. 2013 ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಯಡಿಯೂರಪ್ಪ ಅವರ ಮಂತ್ರಿ ಮಂಡಲದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಸಾರಿಗೆ, ಲೋಕೋಪಯೋಗಿ ಖಾತೆಯನ್ನು ನಿರ್ವಹಿಸಿದ್ದರು.
ಮುಖ್ಯಮಂತ್ರಿ ಸಂತಾಪ: ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
‘ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿಯಾಗಿದ್ದ ಉದಾಸಿ ಅವರು, ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು, ಲೋಕೋಪಯೋಗಿ ಸಚಿವರಾಗಿ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ರಾಜ್ಯದಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದರು. ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ’ ತಿಳಿಸಿದ್ದಾರೆ.
ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿಯಾಗಿದ್ದ ಅವರು, ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು, ಲೋಕೋಪಯೋಗಿ ಸಚಿವರಾಗಿ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ರಾಜ್ಯದಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದರು. (1/2)
— CM of Karnataka (@CMofKarnataka) June 8, 2021