ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿ ವಿಶೇಷ ಗಮನ: ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವತ್ತ ಬಿಜೆಪಿ ವಿಶೇಷ ಗಮನ ಹರಿಸಲಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಇಂದಿನಿಂದ ರಾಜ್ಯಾಧ್ಯಕ್ಷರು ಸೇರಿದಂತೆ ಎಲ್ಲ ಪ್ರಮುಖರು ಭಾಗವಹಿಸುವಂತೆ ಪ್ರತಿ ಜಿಲ್ಲೆಯ ಪ್ರಮುಖರ ಸಮಾವೇಶ ನಡೆಸಲಾಗುತ್ತಿದೆ ಎಂದು ಹೇಳಿದರು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕುರಿತಾಗಿಯೂ ಈ ಸಮಾವೇಶಗಳಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.
ಈ ಸರ್ಕಾರದ ದುರಾಡಳಿತವನ್ನು ಜನರ ಗಮನಕ್ಕೆ ತರುವ ಮೂಲಕ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವತ್ತ ವಿಶೇಷ ತಂತ್ರ ರೂಪಿಸಲಾಗಿದೆ. ಅದಕ್ಕಾಗಿ ಪಕ್ಷ ಸಂಪೂರ್ಣ ಶಕ್ತಿಯನ್ನು ವಿನಿಯೋಗಿಸಲಿದೆ ಎಂದು ಯಡಿಯೂರಪ್ಪ ಹೇಳಿದರು.
ಸಿದ್ದರಾಮಯ್ಯ ಅವರು ಅತಿ ಹೆಚ್ಚು ದಿನ ಮುಖ್ಯಮಂತ್ರಿಯಾಗಿ ದಾಖಲೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ದೇವರಾಜ ಅರಸು ಅವರ ಆಡಳಿತ ವೈಖರಿ ಬೇರೆ, ಸಿದ್ದರಾಮಯ್ಯ ಅವರ ಆಡಳಿತ ಶೈಲಿ ಬೇರೆ. ಇಬ್ಬರನ್ನೂ ಹೋಲಿಕೆ ಮಾಡಲಾಗದು ಎಂದರು. ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರ ಸಾಧನೆ ಸಮಾವೇಶ ನಡೆಸುವುದನ್ನು ಜನರು ಒಪ್ಪುವುದಿಲ್ಲ ಎಂದು ಟೀಕಿಸಿದರು.






