ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್
ಬೆಳಗಾವಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದೆ, ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಅಬ್ಬಯ್ಯ ಪ್ರಸಾದ್ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಮತ್ತು ಇನ್ನುಳಿದ ಪ್ರದೇಶವನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆ ಎಂಬುದಾಗಿ ಮುಂದುವರೆಸಲು ದಿನಾಂಕ: 21-01-2025ರಂದು ಪ್ರಾಥಮಿಕ ಅಧಿಸೂಚನೆಯನ್ನು ರಾಜ್ಯಪತ್ರದಲ್ಲಿ ಪ್ರಕಟಿಲಾಗಿರುತ್ತದೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಆಗಿರುವುದಿಲ್ಲ ಎಂದು ಸದನದಲ್ಲಿ ಪ್ರಸ್ತಾಪಿಸಿದರು.
ಆಕ್ಷೇಪಣೆ/ಸಲಹೆಗಳ ಕುರಿತ ವರದಿಯನ್ನು ಪೌರಾಡಳಿತ ನಿರ್ದೇಶಕರಿಂದ ಧಾರವಾಡ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ವರದಿ ಸಿದ್ದಪಡಿಸಿ ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಲಾಗಿದೆ. ಆದರೆ ಇದೂವರೆಗೂ ರಾಜ್ಯಪಾಲರಿಂದ ಅನುಮೋದನೆ ಬಂದಿರುವುದಿಲ್ಲ. ರಾಜ್ಯಪಾಲರ ಕಚೇರಿಯೊಂದಿಗೆ ಈ ಕುರಿತು ಪತ್ರ ವ್ಯವಹಾರ ಸಹ ಮಾಡಲಾಗಿದೆ. ರಾಜ್ಯಪಾಲರ ಅನುಮೋದನೆಗೆ ಪಕ್ಷಾತೀತವಾಗಿ ಎಲ್ಲಾ ಶಾಸಕರ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಅನುಮೋದನೆ ನೀಡುವಂತೆ ಮನವಿ ಮಾಡಲಾಗುವುದು ಎಂದು ಸಚಿವರು ಸದನದಲ್ಲಿ ಉತ್ತರಿಸಿದರು.






