ಕೊರೊನಾ ಬಿಕ್ಕಟ್ಟಿನಿಂದ ಒಂದು ಬಾರಿ ಇಡೀ ಪ್ರಪಂಚವೇ ನಲುಗಿ ಹೋಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ಪರಿಸ್ಥಿತಿಯಿಂದ ಹೊರಬಂದಿರುವ ಜನರಿಗೆ ಮತ್ತೆ ಕೋವಿಡ್ ಆತಂಕ ಎದುರಾಗಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಸಂಪೂರ್ಣ ಕಡಿಮೆಯಾಗಿ ಜನ ಕೊರೊನಾ ಸಾಂಕ್ರಾಮಿಕ ರೋಗವನ್ನು ಮರೆತ್ತಿದ್ದರು. ಆದರೆ ಇದೀಗ ಹೊಸ ವರ್ಷದ ಆಚರಣೆ ಹೊಸ್ತಿಲಲ್ಲೇ ಕೋವಿಡ್ ಆತಂಕ ಹೆಚ್ಚಾಗಿದೆ.
ಕರ್ನಾಟಕದ ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿದ್ದು ರಾಜ್ಯದ ಗಡಿಭಾಗದಲ್ಲೂ ಆತಂಕ ಹೆಚ್ಚಾಗಿದೆ. ಕೇರಳದಲ್ಲಿ ಕಳೆದ ನವೆಂಬರ್ ಇಡೀ ತಿಂಗಳಲ್ಲಿ ಒಟ್ಟು 479 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಓರ್ವ ಸೋಂಕಿತ ಮೃತಪಟ್ಟಿದ್ದಾರೆ. ಆದರೆ ಡಿಸೆಂಬರ್ ತಿಂಗಳ ಮೊದಲ ಎರಡು ವಾರಗಳಲ್ಲಿ ಬರೋಬ್ಬರಿ ಒಂದು ಸಾವಿರಕ್ಕೂ ಹೆಚ್ಚು ಕೊರೊನಾ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.
ಇನ್ನು ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದಂತೆ ಕರ್ನಾಟಕದ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಿಗೆ ಕೋವಿಡ್ ಹತ್ತಿಕ್ಕಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ತಿಳಿಸಲಾಗಿದೆ. ಇನ್ನು ಆಕ್ಸಿಜನ್, ಬೆಡ್, ಔಷಧಿ ಹಾಗೂ ರೋಗಿಗಳ ಮಾಹಿತಿ ಪಡೆಯುವಂತೆ ಸಂಬಂಧಿಸಿದ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸಂದೇಶ ರವಾನೆ ಮಾಡಲಾಗಿದೆ. ಇನ್ನೇನು ಹೊಸ ವರ್ಷ ಆಚರಣೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಸ್ಥಳಗಳು ಸಿದ್ಧವಾಗುತ್ತಿದ್ದು, ಕೊರೊನಾದಿಂದ ಹೊಸ ವರ್ಷಾಚರಣೆಗೆ ಬ್ರೇಕ್ ಬೀಳುವ ಆತಂಕ ಎದುರಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಗೆ ಹೊಸ ನಿಯಮಗಳನ್ನು ಜಾರಿ ಮಾಡಿದರೆ, ಇದು ಹೊಸ ವರ್ಷಾಚರಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.