0
31

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಿದ್ದು ಟೂರ್ನಿಯ ನಾಲ್ಕನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಸೋಮವಾರ ( ಏಪ್ರಿಲ್ 12 ) ನಡೆಯಿತು. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಕೆಎಲ್ ರಾಹುಲ್, ಕ್ರಿಸ್ ಗೇಲ್ ಮತ್ತು ದೀಪಕ್ ಹೂಡಾ ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 222 ರನ್‌ಗಳ ದೊಡ್ಡ ಗುರಿ ನೀಡಿತು.

ಪಂಜಾಬ್ ಕಿಂಗ್ಸ್ ನೀಡಿದ 222 ರನ್‌ಗಳ ಗುರಿಯನ್ನು ಬೆನ್ನತ್ತಿದ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಎರಡನೇ ಕ್ರಮಾಂಕದಲ್ಲಿ ಬಂದ ನಾಯಕ ಸಂಜು ಸ್ಯಾಮ್ಸನ್ 63 ಎಸೆತಗಳಲ್ಲಿ 119 ರನ್ ಗಳಿಸಿ ಪಂದ್ಯದ ಕೊನೆಯ ಎಸೆತದವರೆಗೂ ಸಹ ಹೋರಾಟ ನಡೆಸಿದರು.

ಈ ಮೂಲಕ ಐಪಿಎಲ್ ಇತಿಹಾಸದಲ್ಲಿಯೇ ನಾಯಕನಾಗಿ ಆಡಿದ ಮೊದಲ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಆಟಗಾರ ಎಂಬ ದಾಖಲೆಯನ್ನು ಸಂಜು ಸ್ಯಾಮ್ಸನ್ ತಮ್ಮ ಹೆಸರಿಗೆ ಬರೆದುಕೊಂಡರು. ಇದಲ್ಲದೆ ಮತ್ತೊಂದು ವಿಶೇಷ ದಾಖಲೆಯನ್ನು ಸಂಜು ಸ್ಯಾಮ್ಸನ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇದುವರೆಗೂ ಐಪಿಎಲ್ ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್ ಗಳಿಸಿರುವ ಶತಕಗಳ ಸಂಖ್ಯೆ 3. ಈ ಶತಕದ ಮೂಲಕ ಅತಿ ಹೆಚ್ಚು ಐಪಿಎಲ್ ಶತಕ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಎರಡು ಶತಕ ಗಳಿಸಿದ್ದ ಆಟಗಾರರಾದ ವೀರೇಂದ್ರ ಸೆಹ್ವಾಗ್, ಮುರಳಿ ವಿಜಯ್, ಅಜಿಂಕ್ಯ ರಹಾನೆ, ಕೆ ಎಲ್ ರಾಹುಲ್ ಮತ್ತು ಶಿಖರ್ ಧವನ್ ಅವರನ್ನು ಸಂಜು ಸ್ಯಾಮ್ಸನ್ ಹಿಂದಿಕ್ಕಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 5 ಶತಕಗಳನ್ನು ಬಾರಿಸುವ ಮೂಲಕ ಮೊದಲನೇ ಸ್ಥಾನದಲ್ಲಿದ್ದರೆ, ಸಂಜು ಸ್ಯಾಮ್ಸನ್ 3 ಶತಕಗಳನ್ನು ಬಾರಿಸಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

 

LEAVE A REPLY

Please enter your comment!
Please enter your name here