ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಘೋಷಣೆ; AICC ಅಂತಿಮ ನಿರ್ಧಾರ
ತಿರುವನಂತಪುರಂ: ಸಾಕಷ್ಟು ಚರ್ಚೆ, ಲೆಕ್ಕಾಚಾರ ಹಾಗೂ ಒಳಪಕ್ಷೀಯ ಸಮಾಲೋಚನೆಗಳ ಬಳಿಕ ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರ ಹೆಸರನ್ನು ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. ಈ ಮೂಲಕ ಹಲವು ದಿನಗಳಿಂದ ಮುಂದುವರಿದಿದ್ದ ಮುಖ್ಯಮಂತ್ರಿ ಆಯ್ಕೆ ಕುರಿತ ಕುತೂಹಲಕ್ಕೆ ತೆರೆಬಿದ್ದಿದೆ.
ಕೇರಳ ಕಾಂಗ್ರೆಸ್ನ ಪ್ರಮುಖ ನಾಯಕರಾದ ಕೆ.ಸಿ. ವೇಣುಗೋಪಾಲ್, ವಿ.ಡಿ. ಸತೀಶನ್ ಹಾಗೂ ರಮೇಶ್ ಚೆನ್ನಿತ್ತಲ ಅವರ ಹೆಸರುಗಳು ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿ ಕೇಳಿಬಂದಿದ್ದವು. ಆದರೆ ಅಂತಿಮವಾಗಿ ಪಕ್ಷದ ವರಿಷ್ಠರು ವಿ.ಡಿ. ಸತೀಶನ್ ಅವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ.
ಏಪ್ರಿಲ್ 9ರಂದು ನಡೆದಿದ್ದ ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 4ರಂದು ಪ್ರಕಟವಾಗಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭರ್ಜರಿ ಗೆಲುವು ಸಾಧಿಸಿತ್ತು. ಒಟ್ಟು 140 ಕ್ಷೇತ್ರಗಳ ಪೈಕಿ 102 ಸ್ಥಾನಗಳನ್ನು ಗೆದ್ದು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದೆ. ಆಡಳಿತಾರೂಢ ಎಲ್ಡಿಎಫ್ ಕೇವಲ 35 ಸ್ಥಾನಗಳಿಗೆ ಸೀಮಿತವಾಗಿ ಹೀನಾಯ ಸೋಲು ಕಂಡಿದೆ.
ಫಲಿತಾಂಶ ಪ್ರಕಟವಾದ ನಂತರ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಸುಮಾರು 10 ದಿನಗಳು ತೆಗೆದುಕೊಂಡಿದ್ದರಿಂದ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ಚರ್ಚೆಗಳು ನಡೆಯುತ್ತಿದ್ದವು. ಹಲವು ಸುತ್ತಿನ ಮಾತುಕತೆಗಳ ಬಳಿಕ ಕಾಂಗ್ರೆಸ್ ಹೈಕಮಾಂಡ್ ಈ ಅಂತಿಮ ನಿರ್ಧಾರ ಕೈಗೊಂಡಿದೆ.
ವಿ.ಡಿ. ಸತೀಶನ್ ಅವರ ಆಯ್ಕೆ ಘೋಷಣೆಯಾಗುತ್ತಿದ್ದಂತೆಯೇ ತಿರುವನಂತಪುರಂನಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.
ಈ ಕುರಿತು ಪ್ರತಿಕ್ರಿಯೆ ನೀಡಿದ ಕೇರಳ ಕಾಂಗ್ರೆಸ್ ಅಧ್ಯಕ್ಷ ಸನ್ನಿ ಜೋಸೆಫ್, ವಿ.ಡಿ. ಸತೀಶನ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಅತ್ಯುತ್ತಮ ನಿರ್ಧಾರ ಎಂದು ಅಭಿಪ್ರಾಯಪಟ್ಟಿದ್ದಾರೆ. ಹೊಸ ನಾಯಕತ್ವದಲ್ಲಿ ರಾಜ್ಯದಲ್ಲಿ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.



