No menu items!
16.3 C
Munich
Sunday, July 19, 2026

ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ; ಸಚಿವ ಧರ್ಮೇಂದ್ರ ಪ್ರಧಾನ್ ಘೋಷಣೆ

Must read

ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ; ಸಚಿವ ಧರ್ಮೇಂದ್ರ ಪ್ರಧಾನ್ ಘೋಷಣೆ

ದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆ ಕೇಂದ್ರ ಶಿಕ್ಷಣ ಸಚಿವಾಲಯ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಸಂಪೂರ್ಣ ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಿಸಿದ್ದಾರೆ.

ಇದೇ ವೇಳೆ ರದ್ದುಗೊಂಡಿದ್ದ ನೀಟ್-ಯುಜಿ 2026 ಮರು ಪರೀಕ್ಷೆಯನ್ನು ಜೂನ್ 21ರಂದು ನಡೆಸಲಾಗುವುದು ಎಂದು ಅಧಿಕೃತವಾಗಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಜೂನ್ 14ರೊಳಗೆ ಪ್ರವೇಶ ಪತ್ರಗಳನ್ನು ವಿತರಿಸಲಾಗುವುದು. ವಿದ್ಯಾರ್ಥಿಗಳಿಗೆ ತಮ್ಮ ಪರೀಕ್ಷಾ ಕೇಂದ್ರವನ್ನು ಒಂದು ವಾರ ಮುಂಚಿತವಾಗಿ ಆಯ್ಕೆಮಾಡಿಕೊಳ್ಳುವ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಮರು ಪರೀಕ್ಷೆಗೆ ಯಾವುದೇ ಹೆಚ್ಚುವರಿ ಶುಲ್ಕ ಇರುವುದಿಲ್ಲ. ಈಗಾಗಲೇ ಪರೀಕ್ಷಾ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳಿಗೆ ಆ ಮೊತ್ತವನ್ನು ಮರುಪಾವತಿ ಮಾಡಲಾಗುವುದು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಧರ್ಮೇಂದ್ರ ಪ್ರಧಾನ್, “ಪರೀಕ್ಷಾ ವ್ಯವಸ್ಥೆಯಲ್ಲಿ ಅಕ್ರಮ ಎಸಗುವವರ ವಿರುದ್ಧ ಸರ್ಕಾರ ‘ಶೂನ್ಯ ಸಹನೆ’ ನೀತಿಯನ್ನು ಅನುಸರಿಸುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮಾಡುವ ಮಾಫಿಯಾಗಳು ಶ್ರಮಪಟ್ಟು ಓದುವ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಲು ಅವಕಾಶ ನೀಡುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಹಗರಣದ ಸಂಪೂರ್ಣ ತನಿಖೆಗಾಗಿ ಸಿಬಿಐ ಈಗಾಗಲೇ ತನಿಖೆಯನ್ನು ತೀವ್ರಗೊಳಿಸಿದ್ದು, ಪ್ರಕರಣದ ಬೇರುಗಳನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಲಾಗಿದೆ.

ಪೇಪರ್-ಪೆನ್ ಮಾದರಿಯ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಸಾಧ್ಯತೆ ಹೆಚ್ಚಿರುವ ಕಾರಣ, ಐಐಟಿ-ಜೆಇಇ ಮಾದರಿಯಲ್ಲೇ ನೀಟ್ ಪರೀಕ್ಷೆಯನ್ನೂ ಡಿಜಿಟಲ್ ವ್ಯವಸ್ಥೆಗೆ ಪರಿವರ್ತಿಸಲಾಗುತ್ತಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಎನ್‌ಟಿಎ ಕಾರ್ಯವೈಖರಿಯನ್ನು ಮತ್ತಷ್ಟು ಬಲಪಡಿಸಲು ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಗುರುವಾರ ತಡರಾತ್ರಿ ಕೇಂದ್ರ ಶಿಕ್ಷಣ ಸಚಿವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ತುರ್ತು ಸಭೆಯಲ್ಲಿ ಈ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಮೇ 3ರಂದು ನಡೆದಿದ್ದ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ, ಜೂನ್ 21ರಂದು ದೇಶಾದ್ಯಂತ ಮರು ಪರೀಕ್ಷೆ ನಡೆಸಲು ಸರ್ಕಾರ ಅನುಮೋದನೆ ನೀಡಿದೆ.

- Advertisement -spot_img

More articles

- Advertisement -spot_img

Latest article