ನಾಯಿ ಕಡಿತವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ನಿಂದ ಕಟ್ಟುನಿಟ್ಟಿನ ಆದೇಶ
ನವದೆಹಲಿ: ದೇಶಾದ್ಯಂತ ಸಾರ್ವಜನಿಕ ಸ್ಥಳಗಳು ಹಾಗೂ ರಸ್ತೆಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ಕುರಿತು ಸುಪ್ರೀಂ ಕೋರ್ಟ್ ಕಠಿಣ ನಿಲುವು ವ್ಯಕ್ತಪಡಿಸಿದೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿ ಈ ಹಿಂದೆ ನೀಡಿದ್ದ ಆದೇಶವನ್ನು ಮಾರ್ಪಡಿಸುವಂತೆ ಅಥವಾ ಹಿಂಪಡೆಯುವಂತೆ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಮಂಗಳವಾರ ನ್ಯಾಯಾಲಯ ವಜಾಗೊಳಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ಹೆಚ್ಚುತ್ತಿರುವ ಸಂಖ್ಯೆಯು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಸವಾಲು ಎಸೆಯುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಹಿಂದೆ ನ್ಯಾಯಾಲಯವು ಸಾರ್ವಜನಿಕ ಸ್ಥಳಗಳಿಂದ ಹಿಡಿದುಕೊಂಡು ಹೋಗುವ ಬೀದಿ ನಾಯಿಗಳಿಗೆ ಕ್ರಿಮಿನಾಶಕ ಚಿಕಿತ್ಸೆ ನೀಡಿದ ಬಳಿಕ ಅವುಗಳನ್ನು ಅದೇ ಸ್ಥಳಕ್ಕೆ ಮರಳಿ ಬಿಡಬಾರದು ಎಂದು ಆದೇಶಿಸಿತ್ತು. ಈ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದ ಪ್ರಾಣಿ ಹಕ್ಕುಗಳ ಕಾರ್ಯಕರ್ತರು, ನಾಯಿಗಳನ್ನು ಬೇರೆಡೆ ಸ್ಥಳಾಂತರಿಸುವುದರಿಂದ ಅವು ದಿಗ್ಭ್ರಮೆಗೊಳ್ಳುವ ಸಾಧ್ಯತೆ ಇದ್ದು, ಜನರ ಮೇಲೆ ದಾಳಿಯ ಅಪಾಯ ಹೆಚ್ಚಬಹುದು ಎಂದು ವಾದಿಸಿದ್ದರು.
ಆದರೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಹಾಗೂ ಎನ್.ವಿ. ಅಂಜಾರಿಯಾ ಅವರಿದ್ದ ತ್ರಿಸದಸ್ಯ ಪೀಠ ಈ ವಾದವನ್ನು ತಳ್ಳಿಹಾಕಿತು.
ವಿಚಾರಣೆ ವೇಳೆ ಪೀಠವು ಸಾರ್ವಜನಿಕರ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತು. ವಿಶೇಷವಾಗಿ ಅಮಾಯಕ ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ ನಡೆಯುತ್ತಿರುವ ಘಟನೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.
ಅರ್ಜಿದಾರರು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ನಿಯಮಾವಳಿಗಳಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಸಮರ್ಪಕ ಕಾರಣಗಳನ್ನು ನೀಡಿಲ್ಲ ಎಂದು ಕೋರ್ಟ್ ತಿಳಿಸಿದೆ.
ಇದೇ ವೇಳೆ, ಬೀದಿ ನಾಯಿಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರಗಳ ವಿರುದ್ಧವೂ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.
ದೇಶದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚುತ್ತಿದೆಯಾದರೂ, ಅದಕ್ಕೆ ತಕ್ಕಂತೆ ಅಗತ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸುವಲ್ಲಿ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಕ್ರಿಮಿನಾಶಕ ಹಾಗೂ ಲಸಿಕಾ ಅಭಿಯಾನಗಳು ಸಮರ್ಪಕ ಯೋಜನೆಯಿಲ್ಲದೆ ವಿರಳವಾಗಿ ನಡೆಯುತ್ತಿವೆ. ಇದು ಪ್ರಾಣಿ ಜನನ ನಿಯಂತ್ರಣ ವ್ಯವಸ್ಥೆಯ ಉದ್ದೇಶವನ್ನೇ ಹಾಳು ಮಾಡುತ್ತಿದೆ ಎಂದು ಕೋರ್ಟ್ ಟೀಕಿಸಿತು.
ರಾಜ್ಯ ಸರ್ಕಾರಗಳು ದೂರದೃಷ್ಟಿಯಿಂದ ಕಾರ್ಯನಿರ್ವಹಿಸಿ ವ್ಯವಸ್ಥಿತ ಕ್ರಮ ಕೈಗೊಂಡಿದ್ದರೆ ಪರಿಸ್ಥಿತಿ ಇಷ್ಟು ಗಂಭೀರವಾಗುತ್ತಿರಲಿಲ್ಲ ಎಂದು ನ್ಯಾಯಾಲಯ ವಿಷಾದ ವ್ಯಕ್ತಪಡಿಸಿತು. ಸುಪ್ರೀಂ ಕೋರ್ಟ್ನ ಈ ಕಟ್ಟುನಿಟ್ಟಿನ ನಿಲುವಿನ ಹಿನ್ನೆಲೆಯಲ್ಲಿ, ದೇಶಾದ್ಯಂತ ಬೀದಿ ನಾಯಿಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರಗಳು ಹಾಗೂ ಸ್ಥಳೀಯ ಸಂಸ್ಥೆಗಳು ತುರ್ತು ಕ್ರಮ ಕೈಗೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.



