No menu items!
13.7 C
Munich
Wednesday, May 20, 2026

GBA ಚುನಾವಣೆಗೆ 3 ತಿಂಗಳ ಕಾಲಾವಕಾಶ ನೀಡಿದ ಸುಪ್ರೀಂ; ಮತ್ತೆ ವಿಳಂಬ ಬೇಡ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ

Must read

GBA ಚುನಾವಣೆಗೆ 3 ತಿಂಗಳ ಕಾಲಾವಕಾಶ ನೀಡಿದ ಸುಪ್ರೀಂ; ಮತ್ತೆ ವಿಳಂಬ ಬೇಡ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಕಾಲಾವಕಾಶ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಚುನಾವಣೆಯನ್ನು ಆಗಸ್ಟ್ 31ರೊಳಗೆ ನಡೆಸಲು ಮೂರು ತಿಂಗಳ ಗಡುವು ನೀಡಿ ಆದೇಶಿಸಿದೆ.
ಈ ಹಿಂದೆ ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ಸ್ಪಷ್ಟ ನಿರ್ದೇಶನ ನೀಡಿತ್ತು. ಆದರೆ ಸಿಬ್ಬಂದಿ ಕೊರತೆ ಸೇರಿದಂತೆ ವಿವಿಧ ಕಾರಣಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರ ಹಾಗೂ ಜಿಬಿಎ ಮುಖ್ಯ ಆಯುಕ್ತರು ಹೆಚ್ಚುವರಿ ಕಾಲಾವಕಾಶ ಕೋರಿದ್ದರು.
ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ, ಚುನಾವಣೆ ನಡೆಸಲು ಅಗತ್ಯ ಸಿದ್ಧತೆಗಳು ನಡೆಯುತ್ತಿವೆ. ಬಜೆಟ್ನಲ್ಲಿ ಹಣವೂ ಮೀಸಲಿಡಲಾಗಿದೆ. ಆದರೆ ಸಿಬ್ಬಂದಿ ಕೊರತೆಯಿಂದಾಗಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನಷ್ಟು ಸಮಯ ಅಗತ್ಯವಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಸರ್ಕಾರ ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿತ್ತು.
ಇದಕ್ಕೆ ಪ್ರತಿಯಾಗಿ ಅರ್ಜಿದಾರರ ಪರ ವಕೀಲರು, ಸರ್ಕಾರ ಈಗಾಗಲೇ ಹಲವು ಬಾರಿ ಕಾಲಾವಕಾಶ ಪಡೆದುಕೊಂಡಿದೆ. ಚುನಾವಣೆ ನಡೆಸುವ ವಿಷಯದಲ್ಲಿ ಉದ್ದೇಶಪೂರ್ವಕ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಅಗತ್ಯವಿದ್ದರೆ 15 ದಿನಗಳ ಹೆಚ್ಚುವರಿ ಸಮಯ ನೀಡಬಹುದು, ಆದರೆ ಮತ್ತಷ್ಟು ವಿಳಂಬಕ್ಕೆ ಅವಕಾಶ ಕೊಡಬಾರದು ಎಂದು ವಾದ ಮಂಡಿಸಿದರು.
ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಪೀಠವೂ ಸರ್ಕಾರದ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಪಾಲಿಕೆ ಚುನಾವಣೆ ಮುಂದೂಡುವ ಪ್ರಯತ್ನ ನಡೆಯುತ್ತಿರುವಂತೆ ಕಾಣುತ್ತಿದೆ ಎಂದು ಹೇಳಿದೆ. ಜೊತೆಗೆ, ಇದೀಗ ನೀಡಿರುವ ಗಡುವೇ ಅಂತಿಮ ಅವಕಾಶ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಎಸ್ಐಆರ್ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿರುವುದು ಹಾಗೂ ಸಿಬ್ಬಂದಿಗಳ ಕೊರತೆಯಿರುವುದನ್ನು ರಾಜ್ಯ ಚುನಾವಣಾ ಆಯೋಗ ತನ್ನ ಅಫಿಡವಿಟ್ನಲ್ಲಿ ಉಲ್ಲೇಖಿಸಿದೆ.

- Advertisement -spot_img

More articles

- Advertisement -spot_img

Latest article