ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್
ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಇಂದೂ ಸಹ ಅನೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೆಲ ಜಿಲ್ಲೆಗಳಿಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗುವ ಸಾಧ್ಯತೆ ಇದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 50ರಿಂದ 60 ಕಿಲೋಮೀಟರ್ ವೇಗದ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕೂಡ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲೂ ಗಾಳಿಯ ವೇಗ ಹೆಚ್ಚಿರಲಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇನ್ನೊಂದೆಡೆ, ಮೇ 22ರಿಂದ ಮೇ 25ರವರೆಗೆ ರಾಜ್ಯದ ಒಳನಾಡು ಭಾಗಗಳಲ್ಲಿ ತೀವ್ರ ಸ್ವರೂಪದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಇದೇ ಅವಧಿಯಲ್ಲಿ ಸಿಡಿಲು ಹಾಗೂ ಮಿಂಚಿನ ಮುನ್ನೆಚ್ಚರಿಕೆ ನೀಡಲಾಗಿದೆ.
ತೀವ್ರ ಹವಾಮಾನದ ಪರಿಣಾಮವಾಗಿ ತಗ್ಗು ಪ್ರದೇಶಗಳಲ್ಲಿ ಜಲಾವೃತ ಮತ್ತು ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಬಲವಾದ ಗಾಳಿಯಿಂದ ಮರಗಳು ಹಾಗೂ ವಿದ್ಯುತ್ ಕಂಬಗಳು ಉರುಳುವ ಸಾಧ್ಯತೆಯಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂದು ಇಲಾಖೆ ತಿಳಿಸಿದೆ.
ಸಾರ್ವಜನಿಕರು ಮಳೆ ಮತ್ತು ಬಿರುಗಾಳಿಯ ಸಮಯದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಇರಬೇಕು, ಅನಗತ್ಯ ಪ್ರಯಾಣ ತಪ್ಪಿಸಬೇಕು ಹಾಗೂ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಎಂದು ಸೂಚಿಸಲಾಗಿದೆ.
ಇದಲ್ಲದೆ, ತೆರೆದ ಪ್ರದೇಶಗಳಲ್ಲಿ ಇಟ್ಟಿರುವ ಕಟಾವು ಮಾಡಿದ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆಯಿರುವುದರಿಂದ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿಕೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.



