No menu items!
30.3 C
Munich
Tuesday, May 26, 2026

ಯೋಗೀಶ್ ಗೌಡ ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಶ್ನಿಸಿ ವಿನಯ್ ಕುಲಕರ್ಣಿ ಅರ್ಜಿ, ವಿಚಾರಣೆ ಮುಂದೂಡಿಕೆ

Must read

ಯೋಗೀಶ್ ಗೌಡ ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ ಪ್ರಶ್ನಿಸಿ ವಿನಯ್ ಕುಲಕರ್ಣಿ ಅರ್ಜಿ, ವಿಚಾರಣೆ ಮುಂದೂಡಿಕೆ

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಬೇಸಿಗೆ ರಜೆ ಬಳಿಕಕ್ಕೆ ಮುಂದೂಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ರದ್ದುಪಡಿಸುವಂತೆ ಹಾಗೂ ಶಿಕ್ಷೆಯ ಅನುಷ್ಠಾನಕ್ಕೆ ತಾತ್ಕಾಲಿಕ ತಡೆ ನೀಡುವಂತೆ ಕೋರಿ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಮತ್ತು ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ವಿಭಾಗೀಯ ಪೀಠ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, “ಈವರೆಗೆ ಸಿಬಿಐ ಪರವಾಗಿ ಆಕ್ಷೇಪಣೆ ಸಲ್ಲಿಕೆಯಾಗಿಲ್ಲ. ಶಿಕ್ಷೆಯಿಂದಾಗಿ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಕಳೆದುಕೊಂಡಿದ್ದು, ಮಧ್ಯಂತರ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಬೇಕು” ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿಬಿಐ ಪರ ವಕೀಲರು, ಅರ್ಜಿಗೆ ಸಂಬಂಧಿಸಿದ ಆಕ್ಷೇಪಣೆ ಸಿದ್ಧವಾಗಿದ್ದು, ಅದನ್ನು ಸಲ್ಲಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಪ್ರಕರಣದ ವಿಚಾರಣೆಯನ್ನು ಬೇಸಿಗೆ ರಜೆ ಬಳಿಕ ಪರಿಗಣಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಮುಂದೂಡಿತು.
ಪ್ರಕರಣದ ಹಿನ್ನೆಲೆ
2016ರಲ್ಲಿ ನಡೆದಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸುದೀರ್ಘ ವಿಚಾರಣೆ ನಡೆಸಿ 2026ರ ಏಪ್ರಿಲ್ 15ರಂದು 17 ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿತ್ತು. ಬಳಿಕ ಏಪ್ರಿಲ್ 17ರಂದು ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಈ ಶಿಕ್ಷೆಯನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಇನ್ನು ಜನಪ್ರತಿನಿಧಿ ಕಾಯ್ದೆ ಪ್ರಕಾರ ಎರಡು ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆಗೆ ಗುರಿಯಾದ ಶಾಸಕರು ಅನರ್ಹರಾಗುತ್ತಾರೆ. ಅದರಂತೆ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಶಿಕ್ಷೆ ಪೂರ್ಣಗೊಂಡ ಬಳಿಕವೂ ಆರು ವರ್ಷಗಳ ಕಾಲ ಅವರು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇರುವುದಿಲ್ಲ.
ಆದರೆ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆ ನೀಡಿದರೆ ಅನರ್ಹತೆ ಆದೇಶವೂ ರದ್ದಾಗುವ ಸಾಧ್ಯತೆ ಇದೆ.

- Advertisement -spot_img

More articles

- Advertisement -spot_img

Latest article