ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ: ಬಿರುಗಾಳಿ ಸಹಿತ ಗುಡುಗು ಮಳೆಯ ಮುನ್ಸೂಚನೆ
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದ್ದು, ಕೆಲವು ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಹಾವೇರಿ, ಗದಗ, ಕೊಪ್ಪಳ, ಧಾರವಾಡ ಹಾಗೂ ರಾಯಚೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಒಣ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಈ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಸೂಚಿಸಿದೆ.
ರಾಜ್ಯದ ಪ್ರಮುಖ ಭಾಗಗಳಲ್ಲಿ, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಸಿಡಿಲು, ಬಿರುಗಾಳಿ ಮತ್ತು ಗುಡುಗು ಮಳೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸಲಹೆ ನೀಡಿದೆ.
ಇನ್ನೊಂದೆಡೆ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯೂ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.



